ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅರಸು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಎಸ್. ರವಿಚಂದ್ರ, ಕಿರಣ್ ಸಿಡ್ಲೇಹಳ್ಳಿ, ಶ್ರೀನಿವಾಸ್, ಎಸ್. ಶಶಿಕಲಾ ಇತರರು ಇದ್ದರು
ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಸುಮಾರು 4 ಲಕ್ಷ ಎಕರೆ ಭೂಮಿಯನ್ನು ಉಳುತ್ತಿದ್ದ ರೈತರಿಗೆ ಹಂಚಿಕೆ ಮಾಡಿ, ಜಮೀನಿಲ್ಲದವರನ್ನು ಜಮೀನುದಾರರನ್ನಾಗಿ ಮಾಡಿದ ಧೀಮಂತ ನಾಯಕರು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್. ರವಿಚಂದ್ರ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವರಾಜ ಅರಸು ಅವರು ಯಾವುದೇ ಅಡೆತಡೆಗಳಿಗೆ ಜಗ್ಗದೆ ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದರು. ಇದರಿಂದ ದಶಕಗಳಿಂದ ಭೂಮಿಯನ್ನು ಉಳುತ್ತಿದ್ದ ರೈತರಿಗೆ ಭೂಮಿಯ ಮೇಲೆ ಹಕ್ಕು ದೊರೆಯುವಂತಾಯಿತು. ಜತೆಗೆ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಜೀತ ವಿಮುಕ್ತಿ ಯೋಜನೆಯನ್ನು ಜಾರಿಗೆ ತಂದು ಶೋಷಿತ ವರ್ಗದ ಜನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟರು. ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದ ದೂರದೃಷ್ಟಿಯ ನಾಯಕರು ಅರಸು ಎಂದು ಹೇಳಿದರು.
ಸಾಹಿತಿ ಕಿರಣ್ ಸಿಡ್ಲೇಹಳ್ಳಿ ಮಾತನಾಡಿ, ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಏಳು ವರ್ಷಗಳ ಅವಧಿ ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹದ್ದು. ಬಡವರು, ಹಿಂದುಳಿದವರು, ಶೋಷಿತರು ಹಾಗೂ ಭೂಹೀನರ ಬದುಕಿನಲ್ಲಿ ಬದಲಾವಣೆ ತರಲು ಹಲವು ಮಹತ್ವದ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದರು ಎಂದು ಹೇಳಿದರು.
ಋಣಮುಕ್ತ ಯೋಜನೆ, ಕಾಳಿ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಹಾವನೂರು ಆಯೋಗದ ವರದಿಯನ್ನು ಜಾರಿಗೆ ತರುವ ಮೂಲಕ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಭದ್ರ ಬುನಾದಿ ಹಾಕಿದರು. 1977ರಲ್ಲಿ ಹಿಂದುಳಿದ ವರ್ಗಗಳ ಇಲಾಖೆಯನ್ನು ಸ್ಥಾಪಿಸುವ ಮೂಲಕ ಹಿಂದುಳಿದ ವರ್ಗಗಳ ಆಶಾಕಿರಣವಾಗಿ ಗುರುತಿಸಿಕೊಂಡರು ಎಂದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ತಹಸೀಲ್ದಾರ್ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್. ಶಶಿಕಲಾ, ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ನೇತ್ರಾವತಿ, ನಾಗರಾಜು, ನಂಜರಾಜು, ಸುರೇಶ್, ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಅಭಿಜಿತ್, ಶೈಲಾ ಸುಧಾ, ಅನುಷಾ, ನಾಗರಾಜು, ಮಹಾಲಿಂಗಯ್ಯ, ಪುಟ್ಟಮಾದು, ಮಹದೇವಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.