ರಾಜ್ಯದ 24 ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ಸೋಮವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ನಂಜನಗೂಡು ತಾಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮುಖಂಡರಾದ ಬಸವರಾಜು, ಮಹೇಶ, ರವಿಕುಮಾರ್, ಬಸವಣ್ಣ ಇತರರು ಪಾಲ್ಗೊಂಡಿದ್ದರು. 
ಮೈಸೂರು

24 ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಿಸಿ

ನಂಜನಗೂಡು : ರಾಜ್ಯದ 24 ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಇವುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಎಚ್.ಎಂ. ಬಸವರಾಜು ಸರ್ಕಾರವನ್ನು ಒತ್ತಾಯಿಸಿದರು.
ನಗರದ ತಾಲೂಕು ಆಡಳಿತ ಕಚೇರಿ ಎದುರು ಸೋಮವಾರ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. ಇದರಿಂದ ಕೃಷಿ ವಲಯ ಕಂಗಾಲಾಗಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗದಲ್ಲಿ ಕೃಷಿಕರು ದಾರಿಕಾಣದಾಗಿದ್ದಾರೆ. ಕರ್ನಾಟಕ ಸರ್ಕಾರ ಇಲಾಖೆಗಳ ಅಂಕಿ ಅಂಶಗಳನ್ನು ಪರಿಗಣಿಸಿ ವಾಸ್ತವ ಸ್ಥಿತಿಯನ್ನು ಅರಿತು ಬರ ಘೋಷಣೆಮಾಡಬೇಕು ಎಂದು ಅವರು ಆಗ್ರಹಿಸಿದರು.
ಮೈಸೂರು ಜಿಲ್ಲೆಯಲ್ಲೂ ಕೃಷಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ನಂಜನಗೂಡು ತಾಲೂಕಿನಲ್ಲಿ ಭತ್ತ ,ರಾಗಿ ,ಜೋಳ ,ಕಬ್ಬು ,ಮೆಕ್ಕೆಜೋಳ, ತರಕಾರಿಗಳು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಕೆರೆ, ಕಟ್ಟೆ ಮತ್ತು ಡ್ಯಾಂಗಳು ತುಂಬಿಲ್ಲ. ಅಂತರ್ಜಲಗಳ ಮಟ್ಟ ಕುಸಿತವಾಗಿರುವ ಪರಿಣಾಮ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವುಗಳ ಕೊರತೆ ಉಂಟಾಗಿದೆ ಎಂದರು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಬಸವರಾಜು, ಕಾರ್ಯದರ್ಶಿ ಮಹೇಶ, ನಂಜನಗೂಡು ತಾಲೂಕು ಅಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಬಸವಣ್ಣ ಇತರರು ಪಾಲ್ಗೊಂಡಿದ್ದರು.