ಹುಣಸೂರು ನಗರದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶಿರಸ್ತೇದಾರ್ ಶ್ರೀಪಾದ್ ನಲವತ್‌ವಾಡಕರ್ ಸಭೆಗೆ ಮಾಹಿತಿ ನೀಡಿದರು. ತಹಸೀಲ್ದಾರ್ ಜೆ.ಮಂಜುನಾಥ್ ಇದ್ದಾರೆ. 
ಮೈಸೂರು

ಸಾಧಕರನ್ನು ಗುರುತಿಸುವಾಗ ಪಾರದರ್ಶಕವಾಗಿರಲಿ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಉಪವಿಭಾಗಾಧಿಕಾರಿ ಕಾವ್ಯಾರಾಣಿ ಅಭಿಪ್ರಾಯ
ಹುಣಸೂರು : ರಾಷ್ಟ್ರೀಯ ಹಬ್ಬಗಳ ಆಚರಣೆ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸ್ಥಳೀಯ ಸಾಧಕರಿಗೆ ಸನ್ಮಾನಿಸುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಅವಶ್ಯಕತೆ ಇದೆ ಎಂದು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಅಭಿಪ್ರಾಯಪಟ್ಟರು.
ನಗರದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭ ಆಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 
ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ, ಸಂವಿಧಾನ ದಿನಾಚರಣೆ ಮುಂತಾದ ರಾಷ್ಟ್ರೀಯ ಹಬ್ಬಗಳ ಆಚರಣೆ ವೇಳೆ ಸ್ಥಳೀಯವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಸಂಪ್ರದಾಯವಾದರೂ, ಸಾಧಕರನ್ನು ಗುರುತಿಸುವ ಪ್ರಕ್ರಿಯೆ ಇನ್ನು ಮುಂದೆ ಅತ್ಯಂತ ಪಾರದರ್ಶಕವಾಗಿರಬೇಕು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯೊಂದಿಗೆ ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿ ಸಾಧಕರನ್ನು ಗುರುತಿಸುವ ಕಾರ್ಯ ಆಗಬೇಕಿದೆ. ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿ ಸಮಿತಿ ನಿರ್ಧರಿಸುವ ಮೂಲಕ ಪ್ರಕ್ರಿಯೆಗಳು ಅತ್ಯಂತ ಪಾರದರ್ಶಕವಾಗಿ ನಡೆಯುವಂತಾಗಬೇಕಿದೆ. ಸರ್ಕಾರಿ ಇಲಾಖೆ ಮತ್ತು  ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವವರನ್ನು ಗುರುತಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ತಹಸೀಲ್ದಾರ್ ಜೆ.ಮಂಜುನಾಥ್ ಮಾತನಾಡಿ, ಗಣರಾಜ್ಯೋತ್ಸವ ಆಚರಣೆಯ ವಿವರಣೆಯನ್ನು ಸಮಗ್ರ ಸಭೆಗೆ ಮತ್ತು ನೂತನವಾಗಿ ನೇಮಕಗೊಂಡಿರುವ ಉಪವಿಭಾಗಾಧಿಕಾರಿಗೆ ನೀಡಿದರು. 
ಸಭೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಗೌರವಾಧ್ಯಕ್ಷ ಕಲ್ಲಹಳ್ಳಿ ವಿಷಕಂಠಪ್ಪ, ಉಂಡುವಾಡಿ ಚಂದ್ರೇಗೌಡ, ಹೊನ್ನಪ್ಪ,, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಚಿಕ್ಕಸ್ವಾಮಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರಾದ ಎಸ್.ಜಯರಾಂ, ಪಿ.ಆರ್.ರಾಚಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.