ಮೈಸೂರು: ಬೆಂಗಳೂರಿನಲ್ಲಿ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ಆಡಿಸುವ ವಿಚಾರವಾಗಿ ಬಿಸಿಸಿಐ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್‌ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಸುವಂತೆ ಮನವಿ ಮಾಡಿದ್ದೇವೆ ಎಂದರು.
ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್‌ಸಿಗ್ನಲ್ ನೀಡಿದ್ದಾರೆ. ನಾನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಐಪಿಎಲ್ ಪಂದ್ಯಾವಳಿ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳು ಆಡಲು ಗ್ರೀನ್ ಸಿಗ್ನಲ್ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ ದೆಹಲಿ ತಂಡದ ಪರವಾಗಿ ಆಡಲು ವಿರಾಟ್ ಕೊಯ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಚಿನ್ನಸ್ವಾಮಿ ಸೇರಿದಂತೆ ಮೂರು ಕ್ರೀಡಾಂಗಣ ಬೆಂಗಳೂರಿನಲ್ಲಿದೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಹೇಳಿದರು.
ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ಕ್ರೀಡಾಂಗಣ ನಿರ್ಮಾಣ ಮಾಡುವುದರ ಜತೆಗೆ ಎಲ್ಲ ಕಡೆಗಳಲ್ಲೂ ಉತ್ತಮ ಮೈದಾನ ನಿರ್ಮಾಣ ಮಾಡಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಒದಗಿಸುವ ಗುರಿ ಹೊಂದಿದ್ದೇವೆ ಎಂದರು.