ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿತ್ತು.
ಬೆಟ್ಟದಪುರ: ಯುವಜನರು ಮತ್ತು ವಿದ್ಯಾರ್ಥಿಗಳು ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿ ಅವುಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವಂತೆ ಕಣಗಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿ.ಕಾರ್ತಿಕ್ ಸಲಹೆ ನೀಡಿದರು.
ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಆಯೋಜಿಸಿದ್ದ ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವುದಲ್ಲದೆ, ಕುಟುಂಬ ಮತ್ತು ಸಮಾಜದ ನೆಮ್ಮದಿಯೂ ಹಾಳಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಸ್ನೇಹ ಬಳಗವನ್ನು ಬೆಳೆಸಿಕೊಂಡು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣ ಮತ್ತು ಭವಿಷ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸವಿತಾ, ಆರೋಗ್ಯ ಮತ್ತು ಸ್ವಚ್ಛತೆಯ ಮಹತ್ವದ ಕುರಿತು ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ಪ್ರವೀಣ್ ಕುಮಾರ್, ಶಿಕ್ಷಕರಾದ ಹಿತೇಶ್, ಸ್ಫೂರ್ತಿ ಹಾಗೂ ಶಿಲ್ಪಾ, ಆಶಾ ಕಾರ್ಯಕರ್ತೆಯರಾದ ಶಿವಮ್ಮ ಮತ್ತು ಮಂಜುಳಾ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೋಮಶೇಖರ್, ರಜೀತ್ ಹಾಗೂ ವಿದ್ಯಾರ್ಥಿಗಳು ಇದ್ದರು.