ಮೈಸೂರು ನಗರದ ರಾಮಸ್ವಾಮಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 
ಮೈಸೂರು

ಮೈಸೂರಿನಲ್ಲಿ ಬಿಜೆಪಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ

ಮೈಸೂರು: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಣವಿಲ್ಲ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಹಾಗೂ ನಗರ ಘಟಕದ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಗುರುವಾರ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ರಾಜ್ಯ ಸರ್ಕಾರ ದಿವಾಳಿಯಾಗುವ ಹಂತಕ್ಕೆ ತಲುಪಿದೆ. ಮಂಗಳೂರಿಗೆ 32 ಸಾವಿರ ಕೋಟಿ ವಿಶೇಷ ಅನುದಾನ ನೀಡುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ಸರ್ಕಾರದ ಬಳಿ ಹಣ ಎಲ್ಲಿದೆ? ಹಣ ಇಲ್ಲದೆ ಬರ ಪರಿಹಾರ ನೀಡಲು ಹಣವಿಲ್ಲದೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಕೈ ತೋರಿಸಲಾಗುತ್ತಿದೆ ಎಂದು ಟೀಕಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದು, ಇದೇ ವೇಳೆ ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ರಾಜ್ಯದ ಜನರು ಸರ್ಕಾರದ ಆಡಳಿತವನ್ನು ಗಮನಿಸುತ್ತಿದ್ದು, ಚುನಾವಣೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಹೇಳಿದರು.

ಅಂಗವಿಕಲರಿಗೆ ನೀಡಬೇಕಾದ ಪಿಂಚಣಿಯನ್ನೂ ಪಾವತಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೆ ಆರ್ಥಿಕ ಶಿಸ್ತು ಇಲ್ಲ. ರಾಜ್ಯ ಸರ್ಕಾರ ಕೋಮಾ ಸ್ಥಿತಿಗೆ ತಲುಪಿದೆ ಎಂದು ಆರೋಪಿಸಿದರು.

ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಮಾರ್ಚ್ ತಿಂಗಳ ಹಣ ನೀಡಿಲ್ಲ. ಇದೀಗ ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಲಿಂಕ್ ಮಾಡಲಾಗುತ್ತಿದೆ ಎಂಬ ಹೊಸ ನೆಪ ಹೇಳುತ್ತಿದ್ದಾರೆ. ಸರ್ಕಾರದ ಬಳಿ ಹಣವಿಲ್ಲದ ಕಾರಣ ಈ ರೀತಿಯ ಕಾರಣಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೂರು ವರ್ಷ ಆಡಳಿತಾವಧಿಯ್ಲಲಿ ಮೈಸೂರಿನಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದರೂ ಇಲ್ಲದಿದ್ದರೂ ಬಿಜೆಪಿಯನ್ನು ಟೀಕಿಸುವುದರಲ್ಲೇ ತೊಡಗಿದ್ದಾರೆ. ರಾಜ್ಯದ ಹಲವು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದರೂ ಬರ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಮಾಜಿ ಮೇಯರ್ ಶಿವಕುಮಾರ್, ಬಿಜೆಪಿ ಮುಖಂಡ ಜೋಗಿ ಮಂಜು ಹಾಗೂ ಇತರರು ಪಾಲ್ಗೊಂಡಿದ್ದರು.