ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಸಭೆ ನಡೆಸಿದರು. ಜಿ. ಲಕ್ಷ್ಮೀಕಾಂತ್ ರೆಡ್ಡಿ, ಸುಮಾಯ್ ರೂಹಿ, ಯುಕೇಶ್ ಕುಮಾರ್, ಶೇಖ್ ತನ್ವೀರ್ ಆಸಿಫ್ ಹಾಗೂ ಇತರರು ಇದ್ದರು. 
ಮೈಸೂರು

ಪೌರ ಕಾರ್ಮಿಕರ ವಿಶ್ರಾಂತಿ ಗೃಹ ನಿರ್ಮಿಸಿ: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ನಿರ್ದೇಶನ

ಮೈಸೂರು: ನಗರ ಹಾಗೂ ಪಟ್ಟಣಗಳಲ್ಲಿ ಪೌರ ಕಾರ್ಮಿಕರ ವಿಶ್ರಾಂತಿ ಗೃಹ ನಿರ್ಮಾಣ ಮಾಡಲು ಆದ್ಯತೆ ನೀಡಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೌರ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಪೌರಕಾರ್ಮಿಕರಿಗೆ ಜೀವ ವಿಮೆಯನ್ನು ಕಡ್ಡಾಯವಾಗಿ ಮಾಡಿಸಿ ವರದಿ ನೀಡಬೇಕು ಎಂದು ಸೂಚನೆ ನೀಡಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಏಜೆನ್ಸಿಯವರು ಕಡಿಮೆ ಸಂಖ್ಯೆಯಲ್ಲಿ ಕೆಲಸಕ್ಕೆ ಪೌರಕಾರ್ಮಿಕರನ್ನು ನಿಯೋಜಿಸುತ್ತಾರೆ ಹಾಗೂ ಅವರಿಗೆ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ ಎಂದು ದೂರುಗಳು ಕೇಳಿ ಬಂದಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ನಿವೇಶನ ಹಾಗೂ ವಸತಿ ರಹಿತ ಪೌರಕಾರ್ಮಿಕರಿಗೆ ವಸತಿ ಸೌಲಭ್ಯವನ್ನು ಆದ್ಯತೆಯ ಮೇರೆಗೆ ಒದಗಿಸಬೇಕು. ಮ್ಯಾನುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡಿದ್ದು, ಸೌಲಭ್ಯ ಪಡೆಯದೆ ಇದ್ದವರನ್ನು ಗುರುತಿಸಿ ಸೌಲಭ್ಯ ನೀಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ಕಳೆದ ಸಾಲಿನಲ್ಲಿ ಎಪಿಎಂಸಿಯಲ್ಲಿ ಕಾರ್ಯನಿರ್ವಹಿಸಿರುವ ಪೌರಕಾರ್ಮಿಕರಿಗೆ ಪಿಎಫ್, ಇಎಸ್‌ಐಯನ್ನು ಏಜೆನ್ಸಿ ಅವರು ಪಾವತಿ ಮಾಡಿಲ್ಲ ಎಂಬ ದೂರು ಕೇಳಿಬಂದಿದ್ದು, ಇದನ್ನು ಪರಿಶೀಲಿಸಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಸುಮಾಯ್ ರೂಹಿ ಅವರು ಮಾತನಾಡಿ, ಪೌರಕಾರ್ಮಿಕರಿಗೆ ಗುರುತುನ ಚೀಟಿ, ಪೇ ಸ್ಲಿಪ್, ಪಿಎಫ್, ಇಎಸ್‌ಐ ಪಾವತಿ, ಜೀವ ವಿಮೆ ಮಾಡಿಸಿರುವ ಬಗ್ಗೆ ಪೂರ್ಣ ವರದಿಯನ್ನು ಆಯೋಗಕ್ಕೆ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹಾಗೂ ಇತರರು ಇದ್ದರು.