ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ 
ಮೈಸೂರು

ಸಚಿವ ಸಂಪುಟ ವಿಸ್ತರಣೆ: ಮೈಸೂರಿನಲ್ಲಿ ಯಾರಿಗೆ ಒಲಿಯಲಿದೆ ಸಚಿವ ಸ್ಥಾನ

ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಕಸರತ್ತು ಪ್ರಾರಂಭಗೊಂಡಿದ್ದು, ಜಿಲ್ಲೆಯ ಯಾವ ಶಾಸಕರು ಸಚಿವ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಸಂದರ್ಭ ಜಿಲ್ಲೆಯವರಾದ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಅವರಿಗೆ ನಗರಾಭಿವೃದ್ಧಿ ಖಾತೆ ನೀಡಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.
ಯತೀಂದ್ರ ಅವರೊಂದಿಗೆ ನರಸಿಂಹರಾಜ ಕ್ಷೇತ್ರದ ಶಾಸಕ, ಡಿ.ಕೆ. ಶಿವಕುಮಾರ್ ಆಪ್ತರಾದ ತನ್ವೀರ್ ಸೇಠ್ ಸಚಿವ ಸ್ಥಾನ ಪಡೆಯುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಅವರಿಗೆ ಸಚಿವ ಸ್ಥಾನ ಒಲಿಯಲಿಲ್ಲ. ಇದೀಗ ಸಚಿವ ಸಂಪುಟ ವಿಸ್ತರಣೆ ಸಂದರ್ಭ ತನ್ವೀರ್ ಸೇಠ್ ಅವರು ಹಿರಿತನ ಹಾಗೂ ಅಲ್ಪಸಂ ಖ್ಯಾತರ ಕೋಟಾದಡಿ ಸಚಿವ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
ಇವರೊಂದಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ.ಎಚ್.ಸಿ. ಮಹದೇವಪ್ಪ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಜಿಲ್ಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಅಲ್ಪಸಂಖ್ಯಾತರ ಕೋಟಾದಡಿ ಜಮೀರ್ ಅಹಮದ್ ಖಾನ್ ಸಚಿವ ಸ್ಥಾನ, ಯು.ಟಿ. ಖಾದರ್ ಸಭಾಧ್ಯಕ್ಷ ಸ್ಥಾನ ಪಡೆದ ಹಿನ್ನೆಲೆಯಲ್ಲಿ ತನ್ವೀರ್ ಸೇಠ್ ನಿರಾಶೆ ಅನುಭವಿಸಬೇಕಾಯಿತು.
ಶಾಸಕ ತನ್ವೀರ್ ಸೇಠ್

ಸಚಿವ ಸ್ಥಾನ ವಂಚಿತರಾದರೂ ಪಕ್ಷದ ನಾಯಕತ್ವದ ಬಗ್ಗೆ ಎಲ್ಲಿಯೂ ಅಪಸ್ವರದ ಮಾತುಗಳನ್ನಾಡದೆ ಬಂದಿದ್ದ ತನ್ವೀರ್‌ಸೇಠ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಸಮಾಧಾನಪಡಿಸಲಾಗಿತ್ತು. 2013ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೂ ತನ್ವೀರ್ ಸೇಠ್ 2ನೇ ಅವಧಿಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿದ್ದರು. ಇದೀಗ ಅಲ್ಪಸಂಖ್ಯಾತರ ಕೋಟಾದಡಿ ಯು.ಟಿ. ಟಿ.ಖಾದರ್ ಸಚಿವ ಸ್ಥಾನ ಪಡೆದಿದ್ದು, ಇವರೊಂದಿಗೆ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಧರಂಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ತನ್ವೀರ್ ಸೇಠ್ ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2013-18ರ ಅವಧಿಯ ಕೊನೆ ಎರಡು ವರ್ಷಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಜೀಜ್ ಸೇಠ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ 2002ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿದ ತನ್ವೀರ್ ಸೇಠ್ ನಂತರ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದರು. 2004, 2008, 2013, 2018 ಮತ್ತು 2023ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದ್ದಾರೆ.
ಮಹದೇವಪ್ಪ ಲಾಬಿ: ಸಚಿವ ಸ್ಥಾನ ಪಡೆಯಲು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಯಾವುದೇ ಲಾಬಿಗೂ ಮಣಿಯದ ಹೈಕಮಾಂಡ್ ಅವರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿತ್ತು. ಹೈಕಮಾಂಡ್ ನಿರ್ಧಾರವನ್ನು ವಿರೋಧಿಸಿ ಮಹದೇವಪ್ಪ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸಿದ್ದರು. ಮಹದೇವಪ್ಪಗೆ ಸಚಿವ ಸ್ಥಾನ ನೀಡುವುದರ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ಅವರ ಬಂಬಲಿಗರ ಒತ್ತಾಯವಾಗಿದೆ. ಬೆಂಬಲಿಗರ ಒತ್ತಾಯಕ್ಕೆ ಹೈಕಮಾಂಡ್ ಯಾವ ರೀತಿ ಮಣೆ ಹಾಕುತ್ತದೆ ಎಂದು ಕಾದು ನೋಡಬೇಕಾಗಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಸಹ ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಆದರೆ, ಅವರ ಪರವಾಗಿ ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆಗಳು ನಡೆದಿಲ್ಲ. ಇವರನ್ನು 2ನೇ ಬಾರಿಗೆ ಸಚಿವ ಸಂಪುಟಕ್ಕೆ ಪರಿಗಣಿಸುವ ಸಾಧ್ಯತೆ ತೀರಾ ಕಡಿಮೆ.
ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ 60:40 ಸೂತ್ರ ಅನುಸರಿಸಲಾಗುತ್ತಿದ್ದು, ಶೇ.60 ರಷ್ಟು ಹಿರಿಯರು, ಶೇ.40 ರಷ್ಟು ಹೊಸಬರಿಗೆ ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಹೀಗಾಗಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಚ್.ಡಿ.ಕೋಟೆಯ ಅನಿಲ್ ಚಿಕ್ಕಮಾದು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ಬಾರಿ ಇವರಿಗೆ ಜಂಗಲ್ ಲಾಡ್ಜ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷರ ಜವಾಬ್ದಾರಿ ನೀಡಲಾಗಿತ್ತು.
ನಿಗಮ, ಮಂಡಳಿಗಳ ಮೇಲೆ ಕಣ್ಣು : ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ವಿವಿಧ ಅಕಾಡೆಮಿಗಳು, ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇರುವ ಕಾರಣ ಅನೇಕ ಮುಖಂಡರು ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಜಂಗಲ್ ಲಾಡ್ಜ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಅದೇ ರೀತಿ ಅಯೂಬ್ ಖಾನ್‌ರನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ, ಎಚ್.ಡಿ. ಗಣೇಶ್‌ರನ್ನು ಮೈಲ್ಯಾಕ್ ಅಧ್ಯಕ್ಷರಾಗಿ, ಮರಿಸ್ವಾಮಿ ಅವರನ್ನು ಕಾಡಾ ಅಧ್ಯಕ್ಷರಾಗಿ, ಹಾಡ್ಯ ರಂಗಸ್ವಾಮಿ ಅವರನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ನಿಗಮ ಮಂಡಳಿಗಳಿಗೂ ಈ ಬಾರಿ ಪ್ರಬಲ ಪೈಪೋಟಿ ಕಂಡು ಬರಲಿದೆ.