ಮೈಸೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಎಸ್‌ಐಆರ್ ಕುರಿತು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದರು. ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನಿಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಸಿ. ಪುಟ್ಟರಂಗಶೆಟ್ಟಿ, ರವಿಶಂಕರ್, ಅನಿಲ್ ಚಿಕ್ಕಮಾದು, ಕೆ. ಹರೀಶ್ ಗೌಡ, ಎಚ್.ಎಂ. ಗಣೇಶ್ ಪ್ರಸಾದ್ ಹಾಗೂ ಇತರರು ಇದ್ದರು.
ಮೈಸೂರು: ಕಾಂಗ್ರೆಸ್ ವತಿಯಿಂದ ಜೂ.28 ರಂದು ನಗರದ ಜೆಕೆ ಮೈದಾನದಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲು ವಿಭಾಗೀಯ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸಮಾವೇಶದ ಪೂರ್ವ ಸಿದ್ಧತೆ ಕುರಿತು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದರು. ಸಮಾವೇಶದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 10 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಇದಕ್ಕೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಎಸ್‌ಐಆರ್ ಕುರಿತು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ತಿಳಿದುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡ ಬೇಕು. ಎಸ್‌ಐಆರ್‌ಅನ್ನು ಯಾರು ಸಹ ನಿರ್ಲಕ್ಷೃ ಮಾಡುವಂತಿಲ್ಲ, ನಿರ್ಲಕ್ಷೃ ಮಾಡಿದರೆ ಹಲವು ಮತದಾನದಿಂದ ವಂಚಿತರಾಗುತ್ತಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಹೋದರೆ ಹಲವು ಸರ್ಕಾರಿ ಸೌಲಭ್ಯಗಳಿಂದ ಜನರು ವಂಚಿತರಾಗುತ್ತಾರೆ. ಈ ವಿಚಾರವನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸಭೆಯಲ್ಲಿ ಸಂಸದ ಸುನಿಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಸಿ. ಪುಟ್ಟರಂಗಶೆಟ್ಟಿ, ರವಿಶಂಕರ್, ಅನಿಲ್ ಚಿಕ್ಕಮಾದು, ಕೆ. ಹರೀಶ್ ಗೌಡ, ಎಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಇತರರು ಇದ್ದರು.