ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು. ಜೆ. ಮಂಜುನಾಥ್, ಎಂ. ಜಸಿಂತಾ, ಮಂಜುನಾಥ ಹಾಗೂ ಇತರರು ಪಾಲ್ಗೊಂಡಿದ್ದರು.
ಮೈಸೂರು: ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಗೆ ವೇಗ ನೀಡುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸಂಬಂಧಿಸಿದ ಇಲಾಖೆಗಳ ಉನ್ನತಾಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಮೈಸೂರನ್ನು ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮದ ತಾಣವಾಗಿ ಮತ್ತಷ್ಟು ಬಲಪಡಿಸುವ ಉದ್ದೇಶದೊಂದಿಗೆ ರೂಪಿಸಲಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯು ಸಾಕಾರಗೊಂಡರೆ, ನಗರದ ಪ್ರವಾಸೋದ್ಯಮ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಹೊಸ ಆಯಾಮ ದೊರೆಯುವ ನಿರೀಕ್ಷೆಯಿದೆ. ಚಿತ್ರ ನಿರ್ಮಾಣಕ್ಕೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ಮೂಲಕ ಮೈಸೂರನ್ನು ಪ್ರಮುಖ ಚಿತ್ರೀಕರಣ ಹಾಗೂ ಚಲನಚಿತ್ರ ನಿರ್ಮಾಣದ ಕೇಂದ್ರವನ್ನಾಗಿ ಬೆಳೆಸುವ ಸಾಧ್ಯತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಅತ್ಯಾಧುನಿಕ ಸೌಲಭ್ಯಗಳಿಗೆ ಒತ್ತು:
ಚಿತ್ರನಗರಿಯನ್ನು ಕೇವಲ ಚಿತ್ರೀಕರಣಕ್ಕೆ ಬಳಸುವ ಪ್ರದೇಶವನ್ನಾಗಿ ರೂಪಿಸುವ ಬದಲು, ದೇಶದಲ್ಲೇ ಅತ್ಯುತ್ತಮ ಮೂಲಸೌಕರ್ಯ ಹೊಂದಿರುವ ಸಮಗ್ರ ಚಲನಚಿತ್ರ ನಿರ್ಮಾಣ ಕೇಂದ್ರವಾಗಿ ಅಭಿವೃದ್ಧಿಪಡಿಸೇಕು. ಅತ್ಯಾಧುನಿಕ ಸ್ಟುಡಿಯೋಗಳು, ಚಿತ್ರೀಕರಣಕ್ಕೆ ಅಗತ್ಯವಿರುವ ತಾಂತ್ರಿಕ ಮೂಲಸೌಕರ್ಯ, ಪೋಸ್ಟ್-ಪ್ರೊಡಕ್ಷನ್ ಸೌಲಭ್ಯಗಳು ಸೇರಿದಂತೆ ಚಲನಚಿತ್ರ ನಿರ್ಮಾಣದ ವಿವಿಧ ಹಂತಗಳಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಚಿತ್ರನಗರಿಯಲ್ಲಿ ಕಲ್ಪಿಸಬೇಕು ಎಂದು ಸಚಿವ ಡಾ.ಯತೀಂದ್ರ ಸೂಚಿಸಿದರು..
ಚಿತ್ರ ನಿರ್ಮಾಣ ಸಂಸ್ಥೆಗಳು, ಕಲಾವಿದರು, ತಂತ್ರಜ್ಞರು ಹಾಗೂ ವಿವಿಧ ಕ್ಷೇತ್ರಗಳ ವೃತ್ತಿಪರರಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತೆ ರೂಪಿಸಬೇಕು ಎಂದರು.
ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಪ್ರತಿ ಹಂತದ ಕಾರ್ಯಯೋಜನೆಯನ್ನು ಸಿದ್ಧಪಡಿಸಿ, ಅದರ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಗೆ ಸಂಬಂಧಿಸಿದಂತೆ ಎದುರಾಗಬಹುದಾದ ಆಡಳಿತಾತ್ಮಕ, ತಾಂತ್ರಿಕ ಹಾಗೂ ಇತರೆ ಸವಾಲುಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಂಡು ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಂದುವರಿಸುವಂತೆ ನಿರ್ದೇಶನ ನೀಡಿದರು.
ಮೈಸೂರು ಈಗಾಗಲೇ ಅರಮನೆ, ಚಾಮುಂಡಿಬೆಟ್ಟ, ದಸರಾ ಸೇರಿದಂತೆ ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟೃಗಳಿಂದ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರನಗರಿ ಯೋಜನೆಯು ನಗರದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಮತ್ತಷ್ಟು ವಿಸ್ತರಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಅಗತ್ಯವಿರುವ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್, ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜಸಿಂತಾ, ಜಂಟಿ ನಿರ್ದೇಶಕ ಮಂಜುನಾಥ ಹಾಗೂ ಇತರರು ಪಾಲ್ಗೊಂಡಿದ್ದರು.