ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಶಾಸಕ ಟಿ.ಎಸ್. ಶ್ರೀವತ್ಸ ಉದ್ಘಾಟಿಸಿದರು. ಸಿ.ಎನ್. ಮಂಜೇಗೌಡ, ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಸ್.ಯುಕೇಶ್ ಕುಮಾರ್, ಜೆ. ಗೋವಿಂದರಾಜು ಹಾಗೂ ಇತರರು ಇದ್ದರು. 
ಮೈಸೂರು

ಮೈಸೂರಿನಲ್ಲಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮೈಸೂರು: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಶಕ್ತಿ ಹೆಚ್ಚುವುದರ ಜತೆಗೆ ಆರೋಗ್ಯವು ಉತ್ತಮಗೊಳ್ಳುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರೀಡೆ ಹಾಗೂ ಶಿಕ್ಷಣದಲ್ಲಿ ಯಾವುದೇ ಜಾತಿ ವ್ಯವಸ್ಥೆಗೆ ಅವಕಾಶವಿರುವುದಿಲ್ಲ. ಕ್ರೀಡೆಗೆ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಇದೆ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಬೇಕು. ಸಾರ್ವಜನಿಕರ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಕೊಡುವುದರ ಜತೆಗೆ ನಿಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.
ಶಾಸಕ ಟಿ.ಎಸ್. ಶ್ರೀವತ್ಸ ಅವರು ಮಾತನಾಡಿ, ಅಧಿಕಾರಿಗಳ ಕಾರ್ಯ ಕ್ಷಮತೆ ಹೆಚ್ಚಿಸುವ ಸಲುವಾಗಿ ಸರ್ಕಾರಿ ನೌಕರರ ಕ್ರೀಡೆಯನ್ನು ಆಯೋಜಿಸಲಾಗಿದ್ದು, ಎಲ್ಲ ಅಧಿಕಾರಿಗಳು ಕ್ರೀಡೆಯಲ್ಲಿ ಭಾಗವಹಿಸಬೇಕು. ಪ್ರತಿದಿನ ಅಧಿಕಾರಿಗಳು ಯಾವುದಾರರು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಗಡಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿ ಕೊಳ್ಳುವುದರಿಂದ ದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿದೆ ಎಂದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ಪ್ರತಿಯೊಬ್ಬ ಅಧಿಕಾರಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡಾ ಮನೋಭಾವ ಬೆಳೆಸಿಕೊಂಡರೆ ಮನಸ್ಸಿಗೂ ದೇಹಕ್ಕೂ ನೆಮ್ಮದಿ ದೊರೆಯುತ್ತದೆ. ನೌಕರರು ಅನುಭವಿಸುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಅಧಿಕಾರಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿ ಕೊಂಡಾಗ ಮಾನಸಿಕ ಸ್ಥಿತಿಯೂ ದೈಹಿಕ ಆರೋಗ್ಯವೂ ಉತ್ತಮವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಜೆ. ಗೋವಿಂದರಾಜು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಸಿ.ಬಿ. ಅರುಣಕುಮಾರ್, ರಾಜ್ಯ ಕಾರ್ಯದರ್ಶಿ ಎಂ.ಕೆ. ಗಣೇಶ್, ಜಂಟಿ ಕಾರ್ಯದರ್ಶಿ ಮಾಲೇಗೌಡ, ಕಾರ್ಯದರ್ಶಿ ಜಯಪ್ಪ, ಸಂಘಟನಾ ಕಾರ್ಯದರ್ಶಿ ಮಹಾದೇವ, ರಾಜ್ಯ ಪರಿಷತ್‌ನ ಸದಸ್ಯರಾದ ರಘು. ಎಸ್.ರೇವಣ್ಣ, ವಿಭಾಗೀಯ ಉಪಾಧ್ಯಕ್ಷ ಮಾಲಂಗಿ ಸುರೇಶ್ ಹಾಗೂ ಇತರರು ಇದ್ದರು.