ಸರಗೂರು ತಾಲೂಕಿನ ಪುರದಕಟ್ಟೆ ಹಾಡಿಗೆ ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಭೇಟಿ ನೀಡಿ ಎಸ್‌ಆರ್‌ಐ ಪ್ರಕೀಯೆ ಪರಿಶೀಲನೆ ನಡೆಸಿದರು.
ಸರಗೂರು: ತಾಲೂಕಿನ ಆರಂಭಗೊಂಡಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಶನಿವಾರ ಹಲವು ಗ್ರಾಮಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಭೇಟಿ ನೀಡಿ, ಪರಿಶೀಲಿಸಿದರು.
ತಾಲೂಕಿನ ಪುರದಕಟ್ಟೆ ಹಾಡಿ ಮತ್ತು ಗ್ರಾಮಗಳ ಸೇರಿದಂತೆ ಇತರ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ, ಪ್ರಕ್ರಿಯೆಯಲ್ಲಿ ತೊಡಗಿರುವ ಬಿಎಲ್‌ಒಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ ಮನೆಗಳಿಗೆ ತೆರಳಿ ಮತದಾರರಿಗೆ ಅರಿವು ಮೂಡಿಸಿ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸಬೇಕು. ಆ ಮೂಲಕ ಯಾರೊಬ್ಬರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಅತ್ಯಂತ ಮಹತ್ವದ್ದಾಗಿದೆ. ಮತದಾನದಿಂದ ಯಾರೂ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಎಲ್ಲರೂ ಸಹಕರಿಸಬೇಕು. ಪರಿಷ್ಕರಣೆ ಸಂಬಂಧ ಯಾವುದೇ ಗೊಂದಲಗಳಿದ್ದರೂ ಮತಗಟ್ಟೆ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು, ಮತದಾರರ ನೋಂದಣಾಧಿಕಾರಿ, ಸಹಾಯಕ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಮತದಾರರಿಂದ ಗಣತಿ ನಮೂನೆಯನ್ನು ಸ್ವೀಕರಿಸಿದ ಬಳಿಕ ಡಿಜಟಲೀಕರಣ ಮಾಡಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಹಸೀಲ್ದಾರ್ ಶ್ರೀನಿವಾಸ, ಸರಗೂರು ಹೋಬಳಿ ರಾಜಸ್ವ ನಿರೀಕ್ಷಕ ರವಿಚಂದ್ರನ್, ಶಿರಸ್ತೇದಾರ್ ಪವನ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.