ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು ರಾಜ್ಯದ ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ವಿಕಾಸ ಸೌಧದಲ್ಲಿರುವ ಸಚಿವರ ಕಚೇರಿಯಲ್ಲಿ ಇತ್ತೀಚೆಗೆ ಭೇಟಿ ಮಾಡಿ, ಮೈಸೂರಿನ ಕೈಗಾರಿಕಾ ಪ್ರದೇಶಗಳಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.
ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ನೂರಾರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಉದ್ಯಮಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಮೈಸೂರಿನ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಅಗತ್ಯ ಸಹಕಾರ ನೀಡಬೇಕು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಬಾಕಿ ಇರುವ ಮೂಲಸೌಕರ್ಯ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಕೋರಲಾಯಿತು. ಈ ವಿಷಯ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವ ವಿಜಯಾನಂದ ಕಾಶಪ್ಪನವರ್ ಭರವಸೆ ನೀಡಿದರು.