ಎಚ್.ಡಿ.ಕೋಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಪೊಲೀಸ್ ಇಲಾಖೆ ಹಾಗೂ ವಿಶ್ವಭಾರತಿ ಎಜುಕೇಷನ್ ಟ್ರಸ್ಟ್ ಸಂಯುಕ್ತವಾಗಿ ಆಯೋಜಿಸಿದ್ದ ಡ್ರಗ್ಸ್ ವ್ಯಸನಮುಕ್ತ ಜಾಗೃತಿ ಕಾರ್ಯಕ್ರಮವನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಟ್ರಸ್ಟ್‌ನ ಆಡಳಿತಾಧಿಕಾರಿ ಜಯದೇವರಾಜೇ ಅರಸ್, ಅಧ್ಯಕ್ಷ ವಿಶ್ವನಾಥ್, ಶೇಷಾಚಲ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚಿಕ್ಕನಾಯಕ ಮತ್ತಿತರರಿದ್ದರು. 
ಮೈಸೂರು

ದುಶ್ಚಟಗಳ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಿ

ಎಚ್.ಡಿ.ಕೋಟೆ: ತಾಲೂಕಿನಲ್ಲಿ ಕೇರಳಂ ಲಾಟರಿ, ಮದ್ಯಪಾನ ಹಾಗೂ ಡ್ರಗ್ಸ್ ಸೇವನೆಯಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕಡಿಮೆ ಆಗಿದ್ದು, ಇದಕ್ಕೆ ಪೊಲೀಸ್ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳ ಕಾರಣ ಎಂದು ಶಾಸಕ ಅನಿಲ್ ಚಿಕ್ಕಮಾದು ಶ್ಲಾಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಪೊಲೀಸ್ ಇಲಾಖೆ ಹಾಗೂ ವಿಶ್ವಭಾರತಿ ಎಜುಕೇಷನ್ ಟ್ರಸ್ಟ್ ಸಂಯುಕ್ತವಾಗಿ ಆಯೋಜಿಸಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಹೆಚ್ಚುತ್ತಿರುವ ಮದ್ಯ, ಡ್ರಗ್ಸ್ ಹಾಗೂ ಇತರ ದುಶ್ಚಟಗಳ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಕೆಲ ವರ್ಷಗಳ ಹಿಂದೆ ಎಚ್.ಡಿ.ಕೋಟೆ ತಾಲೂಕು ಮದ್ಯ ಸೇವನೆಯಲ್ಲಿ ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಆದರೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿರುವ ಪರಿಣಾಮ ಈಗ ಮೂರನೇ ಸ್ಥಾನಕ್ಕೆ ಇಳಿದಿರುವುದು ಸಂತೋಷದ ಸಂಗತಿ. ಇದು ತಾಲೂಕಿನಲ್ಲಿ ಸಕಾರಾತ್ಮಕ ಬದಲಾವಣೆ ಆರಂಭವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಮಕ್ಕಳು ತಮ್ಮ ಪಾಲಕರಿಗೆ ಮದ್ಯಪಾನ ಮತ್ತು ಇತರ ದುಶ್ಚಟಗಳ ದುಷ್ಪರಿಣಾಮಗಳನ್ನು ತಿಳಿಸಿ ಮನವೊಲಿಸಿದರೆ ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ವ್ಯಸನ ಮುಕ್ತ ವಾತಾವರಣ ನಿರ್ಮಾಣವಾಗಬೇಕಾದರೆ ಮನೆ ಮನೆಯಿಂದಲೇ ಜಾಗೃತಿ ಆರಂಭವಾಗಬೇಕು ಎಂದು ಅವರು ಸಲಹೆ ನೀಡಿದರು.
ದೇಶದ ಜನಸಂಖ್ಯೆ ಮತ್ತು ಆರೋಗ್ಯದ ಕುರಿತು ಮಾತನಾಡಿದ ಅವರು, ಪ್ರತಿದಿನ ಸಾವಿರಾರು ಮಕ್ಕಳು ಜನಿಸುತ್ತಿದ್ದು, ಅನೇಕರು ವಿವಿಧ ಕಾರಣಗಳಿಂದ ಮೃತಪಡುತ್ತಿರುವುದು ಕಳವಳಕಾರಿ ಸಂಗತಿ ಎಂದರು.
ಮದ್ಯ ಹಾಗೂ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿರುವ ಪಾಲಕರನ್ನು ಮನವೊಲಿಸುವಲ್ಲಿ ಮಕ್ಕಳು ಪ್ರಮುಖ ಪಾತ್ರವಹಿಸಿದರೆ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಂತಹಂತವಾಗಿ ಹಾಳುಮಾಡುತ್ತದೆ. ವ್ಯಸನಕ್ಕೆ ಒಳಗಾದ ವ್ಯಕ್ತಿಯ ಕುಟುಂಬ, ಆರ್ಥಿಕ ಸ್ಥಿತಿ ಹಾಗೂ ಸಾಮಾಜಿಕ ಜೀವನದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಶಾಲಾ-ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಸಮಾಜದ ಎಲ್ಲ ವರ್ಗದವರ ಸಹಕಾರದಿಂದ ಮಾತ್ರ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದರು.
ಟ್ರಸ್ಟ್‌ನ ಆಡಳಿತಾಧಿಕಾರಿ ಜಯದೇವರಾಜೇ ಅರಸ್, ಅಧ್ಯಕ್ಷ ವಿಶ್ವನಾಥ್, ಶೇಷಾಚಲ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚಿಕ್ಕನಾಯಕ, ಸುನೀಲ್ ಹೊನಗೌಡ, ಸುರೇಶ್‌ನಾಯಕ, ಇಲಾಖೆಯ ಸಿಬ್ಬಂದಿ ಸಯ್ಯದ್ ಕಬಿರುದ್ದೀನ್, ಉಮೇಶ್, ಮಹೇಶ್, ಮಹಿಳಾ ಸಾಂತ್ವನ ಕೇಂದ್ರದ ಜಸೀಲಾ ಇದ್ದರು.