ಬೆಟ್ಟದಪುರ ಸಮೀಪದ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಎಚ್‌ಪಿವಿ ಲಸಿಕೆ ಕುರಿತು ಅರಿವು ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ಆರ್.ಸಂದೀಪ್ ಮಾತನಾಡಿದರು.
ಬೆಟ್ಟದಪುರ : ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಗಾಗಿ ಎಚ್‌ಪಿವಿ ಲಸಿಕೆ ಅತ್ಯಂತ ಸುರಕ್ಷಿತ ಹಾಗೂ ಪರಿಣಾಮಕಾರಿ ಮುನ್ನೆಚ್ಚರಿಕೆ ಕ್ರಮವಾಗಿದ್ದು, ಅರ್ಹ ವಿದ್ಯಾರ್ಥಿನಿಯರು ಯಾವುದೇ ಭಯ ಅಥವಾ ಗೊಂದಲವಿಲ್ಲದೆ ಲಸಿಕೆ ಪಡೆಯಬೇಕು ಎಂದು ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಆರ್.ಸಂದೀಪ್ ಸಲಹೆ ನೀಡಿದರು.
ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಎಚ್‌ಪಿವಿ ಲಸಿಕೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಚ್‌ಪಿವಿ ವೈರಸ್‌ನಿಂದ ಗರ್ಭಕಂಠದ ಕ್ಯಾನ್ಸರ್ ಸೇರಿದಂತೆ ಕೆಲವು ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದರೆ ಸರಿಯಾದ ವಯಸ್ಸಿನಲ್ಲಿ ಎಚ್‌ಪಿವಿ ಲಸಿಕೆ ಪಡೆದರೆ ಇಂತಹ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಲಸಿಕೆ ಸುರಕ್ಷಿತವಾಗಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅರ್ಹ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡಲಾಗುತ್ತಿದೆ. ಪಾಲಕರು ಯಾವುದೇ ತಪ್ಪು ಕಲ್ಪನೆಗಳಿಗೆ ಕಿವಿಗೊಡದೆ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಅವರ ಆರೋಗ್ಯವನ್ನು ಕಾಪಾಡಬೇಕು ಎಂದು ತಿಳಿಸಿದರು.
ಆರೋಗ್ಯ ನಿರೀಕ್ಷಕ ಎಚ್.ಎಸ್.ರವಿ ಮಾತನಾಡಿ, ಆರೋಗ್ಯ ಇಲಾಖೆಯ ವಿವಿಧ ಲಸಿಕಾ ಕಾರ್ಯಕ್ರಮಗಳ ಉದ್ದೇಶ ಹಾಗೂ ಎಚ್‌ಪಿವಿ ಲಸಿಕೆಯ ಮಹತ್ವವನ್ನು ವಿವರಿಸಿದರು. ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ ಮತ್ತು ನಿಯಮಿತ ಆರೋಗ್ಯ ತಪಾಸಣೆಗಳ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಶಿವಣ್ಣ, ಶಿಕ್ಷಕರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.