ಡಿಎಚ್‌ಒ ಕಚೇರಿಯಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ನಗರ ಪ್ರದೇಶದ ಗೃಹ ಆರೋಗ್ಯ ಯೋಜನೆಯ ಆಶಾ ಕಾರ್ಯಕರ್ತೆಯರ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.  
ಮೈಸೂರು

ನಗರ ಪ್ರದೇಶಕ್ಕೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ

ಪ್ರಮುಖ ಮುಖ್ಯಾಂಶಗಳು

  • ಆಶಾ ಕಾರ್ಯಕರ್ತೆಯರಿಗೆ ಪುನರ್ಮನನ ತರಬೇತಿ ಕಾರ್ಯಕ್ರಮ
  • 30 ವರ್ಷ ಮೇಲ್ಪಟ್ಟ ನಾಗರಿಕರ ಮನೆಬಾಗಿಲಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ತಲುಪಿಸುವ ಪ್ರಮುಖ ಉಪಕ್ರಮ
  • ಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೂಲಕ ಮನೆ-ಮನೆ ಸಮೀಕ್ಷೆ ನಡೆಸುವುದು ಪ್ರಮುಖ ಕಾರ್ಯಚಟುವಟಿಕೆ
ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಗೃಹ ಆರೋಗ್ಯ ಯೋಜನೆಯನ್ನು ನಗರ ಪ್ರದೇಶಕ್ಕೆ ವಿಸ್ತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸೋಮವಾರ ಆಯೋಜಿಸಿದ್ದ ಪುನರ್ಮನನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಹಿನ್ನೆಲೆಯಲ್ಲಿ ಕ್ರಿಯಾಯೋಜನೆ, ಕಾರ್ಯಕ್ರಮದ ರೂಪುರೇಷೆಯ ತಿಳಿದುಕೊಳ್ಳಬೇಕು. ಕ್ಷೇತ್ರ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯ ಚಟುವಟಿಕೆ ಪೂರ್ಣಗೊಳಿಸಬೇಕು ಎಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಡಿ.ಜಿ.ನಾಗರಾಜ್ ಮಾತನಾಡಿ, ಗೃಹ ಆರೋಗ್ಯ ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ನಾಗರಿಕರ ಮನೆಬಾಗಿಲಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ತಲುಪಿಸುವ ಪ್ರಮುಖ ಉಪಕ್ರಮವಾಗಿದೆ. 
2024ರ ಅಕ್ಟೋಬರ್‌ನಲ್ಲಿ ಪ್ರಾರಂಭವಾದ ಈ ಯೋಜನೆಯು ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಮತ್ತು ಕ್ಯಾನ್ಸರ್ (ಬಾಯಿ, ಸ್ತನ, ಗರ್ಭಕಂಠ) ಮುಂಚಿತವಾಗಿ ಪತ್ತೆಹಚ್ಚಲು ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೂಲಕ ಮನೆ-ಮನೆ ಸಮೀಕ್ಷೆ ನಡೆಸುವುದು ಪ್ರಮುಖ ಕಾರ್ಯಚಟುವಟಿಕೆಯಾಗಿದೆ ಎಂದರು.
ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಸಾವು-ನೋವು ತಡೆಗಟ್ಟುವುದು. ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳ ತಂಡವು ಮನೆ-ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುತ್ತದೆ. ಜತೆಗೆ, ಔಷಧಗಳನ್ನು ಸರಬರಾಜು ಮಾಡುತ್ತದೆ. ಕಾಯಿಲೆ ಪತ್ತೆಯಾದ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಿದೆ ಎಂದು ತಿಳಿಸಿದರು. 
ನಗರ ಪ್ರದೇಶದ ಗೃಹ ಆರೋಗ್ಯ ಯೋಜನೆಯ ಆಶಾ ಕಾರ್ಯಕರ್ತೆಯರ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. 
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮ್ಮದ್, ತಜ್ಞ ವೈದ್ಯ ಡಾ. ಪ್ರಜ್ವಲ್, ಜಿಲ್ಲಾ ಮಟ್ಟದ ಆರೋಗ್ಯ ಮೇಲ್ವಿಚಾರಕರು ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು.