ಮಾಜಿ ಸಚಿವ ಸಾ.ರಾ.ಮಹೇಶ್  
ಮೈಸೂರು

13, 17ರಂದು ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮಂಜುನಾಥ ತಿಮ್ಮಯ್ಯ

ಪ್ರಮುಖ ಮುಖ್ಯಾಂಶಗಳು

  • ವರುಣ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮವಾಗಿ ಮೇ 13 ಮತ್ತು 17ರಂದು ‘ಜನರೊಂದಿಗೆ ಜನತಾದಳ ಕಾರ್ಯಕ್ರಮ’
  • ಜನತಾದಳ ಪ್ರೀಮಿಯರ್ ಲೀಗ್(ಜೆಪಿಎಲ್) ಮೇ 16, 17 ಮತ್ತು 18 ರಂದು ಬೆಂಗಳೂರಿನಲ್ಲಿ ಆಯೋಜನೆ
ಮೈಸೂರು: ವರುಣ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮವಾಗಿ ಮೇ 13 ಮತ್ತು 17ರಂದು ‘ಜನರೊಂದಿಗೆ ಜನತಾದಳ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಈ ಕಾರ್ಯಕ್ರಮ ಈಗಾಗಲೇ 75 ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮ ಜಿಲ್ಲೆಯಲ್ಲಿ ನಡೆಯುವ ಇದರ ಸಮಾರೋಪ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಅಂತೆಯೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಜನತಾದಳ ಪ್ರೀಮಿಯರ್ ಲೀಗ್(ಜೆಪಿಎಲ್) ಟೂರ್ನಿಯನ್ನು ಮೇ 16, 17 ಮತ್ತು 18 ರಂದು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ತಂಡಗಳೂ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಮೈಸೂರು ಜಿಲ್ಲೆ ತಂಡ(ಒಡೆಯರ್ ವಾರಿಯರ್ಸ್)ದ ಪೋಸ್ಟರ್ ಬಿಡುಗಡೆಗೊಳಿಸಿದರು. ಶಾಸಕ ಜಿ.ಡಿ. ಹರೀಶ್‌ಗೌಡ, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಅಶ್ವಿನ್‌ಕುಮಾರ್, ಮಾಜಿ ಮೇಯರ್‌ಗಳಾದ ಆರ್.ಲಿಂಗಪ್ಪ, ಎಂ.ಜೆ.ರವಿಕುಮಾರ್, ಸೋಮಣ್ಣ, ಜೆಡಿಎಸ್ ನಗರಾಧ್ಯಕ್ಷ ಎಸ್.ಬಿ.ಎಂ. ಮಂಜು ಇನ್ನಿತರರಿದ್ದರು.