- ಬೆಳೆಗಳಿಗೆ ನೀರಿಲ್ಲ ಎಂದು ಅಧೀಕ್ಷಕ ಇಂಜಿನಿಯರ್ ರಘುಪತಿ ಹೇಳಿಕೆ
ಮೈಸೂರು: ಕಬಿನಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದ ನೀರನ್ನು ಅವಲಂಬಿಸಿ ಯಾವುದೇ ಬೆಳೆಗಳನ್ನು ಬೆಳೆಯಬಾರದು ಎಂದು ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಜೂ.1ರಿಂದ ಜು.20ರವರೆಗೆ ಕಬಿನಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದೆ.
ಪ್ರಸ್ತುತ ಕಬಿನಿ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 9.83 ಟಿಎಂಸಿ ಹಾಗೂ ಕೃಷಿ ಚಟುವಟಿಕೆಗಳಿಗಾಗಿ 2.75 ಟಿ.ಎಂ.ಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ.
ಎಲ್‌ನಿನೊ ಪರಿಣಾಮ ಹಾಗೂ ಜಲಾಶಯಗಳ ಒಳಹರಿವು ಶೂನ್ಯಕ್ಕೆ ಇಳಿದಿರುವ ಬರದ ಪರಿಸ್ಥಿತಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಮತ್ತು ರಾಜ್ಯ ಜಲ ನೀತಿಯನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗಿದೆ. ಮುಂಬರುವ ದಿನಗಳಲ್ಲಿ ನೀರಿನ ಅಭಾವ ಉಂಟಾಗದಂತೆ ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಸದ್ಬಳಕೆ ಮಾಡಲು ನಿರ್ಧರಿಸಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ನೀರು ಒದಗಿಸಲು ಸಾಧ್ಯವಿಲ್ಲ. ಆದ್ದರಿಂದ ರೈತರು ಜಲಾಶಯದ ನೀರನ್ನು ಅವಲಂಬಿಸಿ ಯಾವುದೇ ಬೆಳೆಗಳನ್ನು ಬೆಳೆಯದೆ ಸಹಕರಿಸಬೇಕು ಎಂದು ಕಬಿನಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ, ಅಧೀಕ್ಷಕ ಇಂಜಿನಿಯರ್ ಕೆ.ಕೆ. ರಘುಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.