ಕುರುಬೂರು ಶಾಂತಕುಮಾರ್ 
ಮೈಸೂರು

ಸಚಿವರು, ಶಾಸಕರು ರೈತರ ಮನೆಗಳಲ್ಲಿ ವಾಸ್ತವ್ಯ ಮಾಡಲಿ

ಕುರುಬೂರು ಶಾಂತಕುಮಾರ್ ಮನವಿ ಮಿತವ್ಯಯದಲ್ಲಿ ಬೆಳಗಾವಿ ಅಧಿವೇಶನ ನಡೆಯಲಿ

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಎದುರಾಗಿರುವ ಹಣಕಾಸಿನ ಕೊರತೆ ಗಮನದಲ್ಲಿಟ್ಟುಕೊಂಡು, ಬೆಳಗಾವಿ ವಿಧಾನಮಂಡಲ ಅಧಿವೇಶನವನ್ನು ಮಿತವ್ಯಯದಲ್ಲಿ ನಡೆಸಬೇಕು. ಈ ಸಂದರ್ಭದಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡುವ ಬದಲು ರೈತರ ಮನೆಗಳಲ್ಲಿ ಉಳಿದುಕೊಳ್ಳಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ.

ಪ್ರಸ್ತುತ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಜನಪ್ರತಿನಿಧಿಗಳಿಗೆ ಅರಿವಿದೆ. ಸರ್ಕಾರ 224 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದು ಸ್ವಾಗತಾರ್ಹ. ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಯೂ ಇದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಿ ರೈತರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಾಗಿರುವುದು ಶ್ಲಾಘನೀಯ ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವಿಧಾನಮಂಡಲ ಅಧಿವೇಶನದ ವೇಳೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ವಸತಿ ಮತ್ತು ಇತರ ಸೌಕರ್ಯಗಳಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಈ ಬಾರಿ ಆ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹೋಟೆಲ್‌ಗಳಲ್ಲಿ ಉಳಿಯದೆ ರೈತರ ಮನೆಗಳಲ್ಲಿ ವಾಸ್ತವ್ಯ ಹೂಡಬೇಕು. ಇದಕ್ಕಾಗಿ ನೂರಾರು ರೈತ ಕುಟುಂಬಗಳು ಸಿದ್ಧವಿದ್ದು, ಊಟೋಪಚಾರ ಸೇರಿದಂತೆ ಆತಿಥ್ಯದ ಸಂಪೂರ್ಣ ವೆಚ್ಚವನ್ನು ರೈತರೇ ಭರಿಸಲಿದ್ದಾರೆ. ಜತೆಗೆ, ರೈತರ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಂಡು ಅಧಿವೇಶನದಲ್ಲಿ ಪರಿಣಾಮಕಾರಿಯಾಗಿ ಚರ್ಚಿಸಲು ಅವಕಾಶವಾಗಲಿದೆ ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ, ವಾರಾಂತ್ಯದಲ್ಲಿ ಶಾಸಕರು ಮತ್ತು ಅಧಿಕಾರಿಗಳು ಊರುಗಳಿಗೆ ತೆರಳುವ ಬದಲು ರಜಾ ದಿನಗಳಲ್ಲಿಯೂ ಕಲಾಪ ನಡೆಸಬೇಕು. ಪ್ರತಿದಿನ ಹೆಚ್ಚುವರಿಯಾಗಿ ಎರಡು ಗಂಟೆಗಳ ಕಾಲ ಕಲಾಪ ನಡೆಸುವ ಮೂಲಕ ಅಧಿವೇಶನದ ಅವಧಿಯನ್ನು ಸದುಪಯೋಗಪಡಿಸಿಕೊಂಡು ಸರ್ಕಾರಕ್ಕೆ ಉಂಟಾಗಬಹುದಾದ ಹೆಚ್ಚುವರಿ ಆರ್ಥಿಕ ಹೊರೆ ತಗ್ಗಿಸಬಹುದು ಎಂದು ಸಲಹೆ ನೀಡಿದ್ದಾರೆ.