ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜ್ಞಾನವೃದ್ಧಿಗೆ ಗ್ರಂಥಾಲಯಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಕರೆ ನೀಡಿದರು.
ನಗರ ಕೇಂದ್ರ ಗ್ರಂಥಾಲಯ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮೈಸೂರು ಗ್ರಂಥಪಾಲಕರು ಹಾಗೂ ಮಾಹಿತಿ ವಿಜ್ಞಾನಿಗಳ ಸಂಘ (ಮೈಲಿಸಾ) ವತಿಯಿಂದ ಸೋಮವಾರ ಪೀಪಲ್ಸ್ ಪಾರ್ಕ್ನ ನಗರ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2026ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ಗ್ರಂಥಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಬೇಕು. ಓದುವ ಹವ್ಯಾಸವನ್ನು ಬೆಳೆಸಿಕೊಂಡು ಜ್ಞಾನ ಸಂಪಾದನೆಗೆ ಆದ್ಯತೆ ನೀಡಬೇಕು. ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಇಂತಹ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಆಶಿಸಿದರು.
ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಮಾತನಾಡಿ, ವಚನಗಳಲ್ಲಿರುವ ಜೀವನಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ವಚನಗಳನ್ನು ಕಾಮಿಕ್ಸ್ ರೂಪದಲ್ಲಿ ಪರಿಚಯಿಸುವ ಹಾಗೂ ಅವುಗಳನ್ನು ಹಾಡುವ ಮೂಲಕ ಕಲಿಸುವ ಕಾರ್ಯ ಮೆಚ್ಚುವಂತಹದು ಎಂದರು.
ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಗ್ರಂಥಾಲಯಕ್ಕೆ ಬರುತ್ತಿರುವುದು ಸಂತಸದ ಸಂಗತಿ. ಅವರ ಅನುಕೂಲಕ್ಕಾಗಿ ಕೈಗೊಳ್ಳುತ್ತಿರುವ ವಿಶೇಷ ಚಟುವಟಿಕೆಗಳನ್ನು ಪ್ರಶಂಸಿಸಿದರು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಗ್ರಂಥಪಾಲಕರಾದ ಜಿ.ವಿಜಯನಾಗ್, ಡಾ.ಎಚ್.ಟಿ.ಹರೀಶ್ ಹಾಗೂ ಎನ್.ಟಿ. ಭಾರತಿ ಅವರಿಗೆ ‘ಉತ್ತಮ ಗ್ರಂಥಪಾಲಕ ಪ್ರಶಸ್ತಿ-2026’ ಪ್ರದಾನ ಮಾಡಲಾಯಿತು.
ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಗ್ರಂಥಪಾಲಕ ಡಾ.ಸಿ.ಪಿ.ರಾಮಶೇಷ್ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಬಿ.ಮಂಜುನಾಥ್ ಸ್ವಾಗತಿಸಿದರು.
ಇದಕ್ಕೂ ಮುನ್ನ ಸರ್ಕಾರಿ ಶಾಲಾ ಮಕ್ಕಳಿಗಾಗಿ ಎರಡು ಕಾರ್ಯಾಗಾರಗಳನ್ನು ಆಯೋಜಿಸಲಾಗಿತ್ತು. ರಂಗಾಯಣದ ರಂಗ ನಿರ್ದೇಶಕ ಪ್ರವೀಣ್ ಬೆಳ್ಳಿ ಅವರು ನಾಟಕದ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು. ಶ್ರುತಿ ಅವರು ವಚನಗಳನ್ನು ಕಾಮಿಕ್ಸ್ ರೂಪದಲ್ಲಿ ಪರಿಚಯಿಸುವುದು ಹಾಗೂ ಅವುಗಳನ್ನು ಹಾಡುವ ವಿಧಾನದ ಕುರಿತು ಮಕ್ಕಳಿಗೆ ತರಬೇತಿ ನೀಡಿದರು.