ಬಾಲ್ಯವಿವಾಹ ನಿಷೇಧ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ.ಪಿ.ಶಿವರಾಜ್ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಎಸ್. ಮಂಜು , ಎನ್.ಟಿ.ಯೋಗೇಶ್,ವಿಜಯ್ ಕುಮಾರ್ ಇತರರಿದ್ದರು.
- ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು
- ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು
ಮೈಸೂರು:ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.
2025- 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಫೆ.11 ರಂದು ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದು ಹೇಳಿದರು.
ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್.ಟಿ.ಯೋಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಇತರರಿದ್ದರು.