ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದ ಓಣಿ ಕಟ್ಟೆ ಬಡಾವಣೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವಂತೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಿಳೆಯರು ಖಾಲಿ ಕೊಡ ಪ್ರದರ್ಶನ ಮಾಡಿದರು.
- ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಆಕ್ರೋಶ
- ಸಮಸ್ಯೆ ಬಗೆಹರಿಸುವಂತೆ ಆಗ್ರಹ
ಮಾಕೋಡು: ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬುಧವಾರ ಗ್ರಾಮ ಪಂಚಾಯಿತಿಗೆ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮೂರು ತಿಂಗಳಿಂದ ಗ್ರಾಮದಲ್ಲಿ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಪ್ರತಿದಿನ ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿ ಹಲವು ದಿನಗಳಾದರೂ ನೀರು ಸರಬರಾಜು ಆಗುತ್ತಿಲ್ಲ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.
ಗ್ರಾಮ ನಿವಾಸಿ ಲಕ್ಷ್ಮೀ ಮಾತನಾಡಿ, ಮೂರು ತಿಂಗಳಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಕೊಳವೆ ಬಾವಿಯಿಂದ ಪ್ರತಿದಿನ ಕುಡಿಯುವ ನೀರು ತರುತ್ತಿದ್ದೇವೆ. ಇದರಿಂದ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ನೀರಿನ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಮುಂದೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.