ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಎಎಸ್‌ಪಿ ಮಲ್ಲಿಕ್, ಡಿವೈಎಸ್ಪಿ ರಘು, ವೃತ್ತ ನಿರೀಕ್ಷಕ ಚಂದ್ರಶೇಖರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. 
ಮೈಸೂರು

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಿ

ನಂಜನಗೂಡು: ತಾಲೂಕಿನಲ್ಲಿ ಸರಣಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಶುಕ್ರವಾರ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಗರದ ತಾಲೂಕು ಆಡಳಿತ ಭವನದಲ್ಲಿ ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಇತ್ತೀಚೆಗೆ ನಡೆದ ಸರಣಿ ದರೋಡೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ನಂಜನಗೂಡು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಸಾರ್ವಜನಿಕ ಸುರಕ್ಷತೆ, ಸಾಮಾಜಿಕ ಶಾಂತಿ ಹಾಗೂ ಸಮಾಜದ ಭದ್ರತೆಗೆ ಧಕ್ಕೆ ತರುವ ಯಾವುದೇ ರೀತಿಯ ಅಪರಾಧಗಳನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಪರಾಧಗಳಲ್ಲಿ ಭಾಗಿಯಾಗುವವರನ್ನು ತಕ್ಷಣ ಬಂಧಿಸಿ ಕಾನೂನು ಬದ್ಧವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.
ಕ್ಷೇತ್ರದ ನಾಕಬಂದಿಯಲ್ಲಿ ಚೆಕ್‌ಪೋಸ್ಟ್ ರಚಿಸಿ, ತಾಲೂಕಿನ ಒಳಗೆ ಬರುವ, ಹೊರಗೆ ಹೋಗುವ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು. ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ಸಮಯದಲ್ಲೂ ಕಠಿಣ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಶಾಂತಿ, ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಕರ್ತವ್ಯವಾಗಿರುತ್ತದೆ ಪೊಲೀಸರ ನಿರ್ಲಕ್ಷ್ಯ ನಂಜನಗೂಡು ಜನರಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದು ಆತಂಕ ಹುಟ್ಟಿಸಿದೆ. ಶಾಂತಿ ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಬೇಕು. ಜನರಿಗೆ ಉತ್ತರಿಸಬೇಕಾದರೆ ನಮ್ಮಲ್ಲಿ ಮಾಹಿತಿ ಇರಬೇಕು. ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಬೇಕು ಎಂದು ಖಡಕ್ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸಿಬ್ಬಂದಿ ಕೊರತೆ ನಿವಾರಣೆ ಮಾಡಲು ನಾನು ಬದ್ಧನಾಗಿರುತ್ತೇನೆ. ಮುಂಬರುವ ದಿನಗಳಲ್ಲಿ ನಂಜನಗೂಡು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳಿಗೆ ಅವಕಾಶ ನೀಡುವುದಿಲ್ಲ. ಲೋಪದೋಷಗಳು ಯಾವುದು ಎಂಬುದನ್ನೂ ಕೂಲಕಂಷವಾಗಿ ಪರಿಶೀಲಿಸುತ್ತೇನೆ. ರಾತ್ರಿ, ಹಗಲು ಸಾರ್ವಜನಿಕ ಸೇವೆಗೆ ನಮ್ಮ ಇಲಾಖೆ ಬದ್ಧವಾಗಿರುತ್ತದೆ ಎಂದು ಭರವಸೆ ನೀಡಿದರು.
ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು , ಎಎಸ್‌ಪಿ ಮಲ್ಲಿಕ್, ಡಿವೈಎಸ್ಪಿ ರಘು, ವೃತ್ತ ನಿರೀಕ್ಷಕ ಚಂದ್ರಶೇಖರ್, ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.