ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶ ಸುಧಾರಣೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿ.ಪಂ. ಸಿಇಒ ಎಸ್. ಯುಕೇಶ್ ಕುಮಾರ್ ಸಭೆ ನಡೆಸಿದರು.
ಮೈಸೂರು: ಜಿಲ್ಲೆಯ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಉತ್ತಮಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ಬಿಇಓಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ನಿರ್ದೇಶನ ನೀಡಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶ ಸುಧಾರಣೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮೊದಲ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ನಂಜನಗೂಡು, ಮೈಸೂರು ದಕ್ಷಿಣ ತಾಲೂಕಿನ ಶಾಲೆಗಳಿಗೆ ನೊಟೀಸ್ ನೀಡಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಬೇಕು ಎಂದರು.
ಫಲಿತಾಂಶ ಸುಧಾರಣೆಗೆ ತಾಲೂಕು ಹಂತದಲ್ಲಿ ತಂಡಗಳನ್ನು ರಚಿಸಿಕೊಂಡು ಆ ಶಾಲೆಗಳ ಫಲಿತಾಂಶ ವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲ 3 ಸ್ಥಾನದಲ್ಲಿ ಇರುವಂತೆ ಎಲ್ಲರು ಶ್ರಮಿಸಬೇಕು. ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳಲ್ಲಿ ಫಲಿತಾಂಶ ವಿಶ್ಲೇಷಿಸಿ, ವಿಷಯವಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಯಟ್ ಅಧಿಕಾರಿಗಳು ಇದ್ದರು.