ಅಗ್ನಿ ದುರಂತಕ್ಕೆ ಒಳಗಾದ ಮಾರಾ ರೆಸ್ಟೋ ಪಬ್‌ಗೆ ಮಂಗಳವಾರ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರು: ಅಗ್ನಿ ದುರಂತ ನಡೆದ ಮಾರಾ ರೆಸ್ಟೋ ಪಬ್‌ಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರಿಂದ ಮಾಹಿತಿ ಪಡೆದರು. ಇದಕ್ಕೂ ಮುನ್ನ ಅಗ್ನಿ ಅನಾಹುತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾರಾ ರೆಸ್ಟೋ ಪಬ್‌ನಲ್ಲಿ ಗ್ರಾಹಕರಿಗೆ ಲಿಕ್ಕರ್ ಪೂರೈಕೆ ಮಾಡಲು ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಅಲ್ಲಿ ರೆಸ್ಟೋರೆಂಟ್ ನಡೆಸಲು ಮಾತ್ರ ಅವಕಾಶ ಇತ್ತು. ಅಕ್ರಮವಾಗಿ ಮದ್ಯ ಪೂರೈಕೆ ಮಾಡುತ್ತಿರುವ ವಿಚಾರ ತಿಳಿದರೂ ಅಬಕಾರಿ ಇಲಾಖೆ ಕಣ್ಣು ಮುಚ್ಚಿ ಕುಳಿತಿತ್ತು. ಈ ಹಿನ್ನೆಲೆಯಲ್ಲಿ ಅಬಕಾರಿ ಡಿಸಿ ಅಮಾನತಿಗೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದರು.
ನಗರದ ಹಲವು ಕಡೆಗಳಲ್ಲಿ ಅನುಮತಿ ಇಲ್ಲದೆ ಮದ್ಯ ಪೂರೈಕೆ ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬರುತ್ತಿದೆ. ಹಾಗಾಗಿ ಇಂತಹ ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಮಾಡಿಕೊಟ್ಟಿರುವ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಪೊಲೀಸರಿಗೂ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಅಗ್ನಿ ಸುರಕ್ಷತೆಗೆ ಮಾರಾ ರೆಸ್ಟೋ ಪಬ್ ಯಾವುದೇ ಕ್ರಮ ವಹಿಸಿಲ್ಲ. ಆಫ್ರಿಕಾದ ಥೀಮ್‌ಅಡಿಯಲ್ಲಿ ಮಾರಾ ರೆಸ್ಟೋ ಪಬ್‌ಅನ್ನು ಹುಲ್ಲು, ಬಿದಿರು ಬಳಸಿ ನಿರ್ಮಿಸಲಾಗಿದೆ. ಇದರಿಂದ ಅಗ್ನಿ ದುರಂತ ಸಂಭವಿಸಿದೆ. ಅಗ್ನಿ ಶಾಮಕ ದಳದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಹೀಗಾಗಿ ಅಗ್ನಿ ಶಾಮಕ ದಳ ಅಧಿಕಾರಿಗಳ ವಿರುದ್ಧವೂ ಕ್ರಮ ವಹಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಪರಿಹಾರದ ಭರವಸೆ: ಅಗ್ನಿ ದುರಂತದಲ್ಲಿ ಗಾಯಗೊಂಡವರು ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳು ಚೇತರಿಸಿ ಕೊಳ್ಳುತ್ತಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರು ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಸಚಿವರು ಮೃತಪಟ್ಟವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು.