ದಕ್ಷಿಣ ಏಷ್ಯಾ ಮಟ್ಟದ ವಿಶ್ವವಿದ್ಯಾಲಯಗಳ ಶ್ರೇಯಾಂಕದಲ್ಲಿ 247ನೇ ಸ್ಥಾನ ಹಾಗೂ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದ ಸಾಧನೆಯನ್ನು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಬಿ.ಲಿಂಗರಾಜು ಪ್ರಶಂಸಿಸಿದ್ದಾರೆ.
ಮೈಸೂರು ನಗರದ ಶೈಕ್ಷಣಿಕ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದೆ. ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯ ಮೂಲಕ ದೇಶಕ್ಕೆ ಅನೇಕ ಶಿಕ್ಷಣ ತಜ್ಞರು, ವಿಜ್ಞಾನಿಗಳು, ಸಂಶೋಧಕರು, ಆಡಳಿತಗಾರರು ಹಾಗೂ ಉದ್ಯಮಿಗಳನ್ನು ಕೊಡುಗೆಯಾಗಿ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಾಧನೆಯ ಹಿಂದೆ ಕುಲಪತಿಗಳು, ಕುಲಸಚಿವರು, ಆಡಳಿತ ಮಂಡಳಿ, ಸಿಂಡಿಕೇಟ್ ಮತ್ತು ಶೈಕ್ಷಣಿಕ ಮಂಡಳಿ ಸದಸ್ಯರು, ಪ್ರಾಧ್ಯಾಪಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಪರಿಶ್ರಮ, ಬದ್ಧತೆ ಹಾಗೂ ಸಂಘಟಿತ ಪ್ರಯತ್ನವಿದೆ ಎಂದು ಶ್ಲಾಘಿಸಿದರು.
ಇಂದಿನ ಸ್ಪರ್ಧಾತ್ಮಕ ಜಾಗತಿಕ ವ್ಯವಸ್ಥೆಯಲ್ಲಿ ವಿಶ್ವವಿದ್ಯಾನಿಲಯಗಳು ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲಯುತ ಮಾನವ ಸಂಪನ್ಮೂಲ ಸೃಷ್ಟಿಸುವುದರ ಜತೆಗೆ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡುವ ಕೇಂದ್ರಗಳಾಗಿವೆ. ಈ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯವು ನಗರದ ಕೈಗಾರಿಕಾ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಮತ್ತಷ್ಟು ನಿಕಟವಾಗಿ ಕೈಜೋಡಿಸಬೇಕು ಎಂದು ಆಶಿಸಿದರು.