ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವ ಕುಮಾರ್ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿ. ಲಕ್ಷ್ಮೀಕಾಂತ್ ರೆಡ್ಡಿ, ಯುಕೇಶ್ ಕುಮಾರ್, ಆರ್. ಐಶ್ವರ್ಯ, ಎಂ.ಕೆ. ಸವಿತಾ ಇದ್ದರು. 
ಮೈಸೂರು

ಮೈಸೂರು: ಎಸ್‌ಐಆರ್‌ನಲ್ಲಿ 1.28 ಲಕ್ಷ ಮತದಾರರಿಗೆ ನೋಟಿಸ್

ಮೈಸೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮಾಹಿತಿ ತಾರ್ಕಿಕವಾಗಿ ಹೊಂದಾಣಿಕೆಯಾಗದ ಹಾಗೂ 2002ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಆಗದ ಜಿಲ್ಲೆಯ ಒಟ್ಟು 1,28,216 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಹೇಳಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನೋಟಿಸ್‌ನಲ್ಲಿಯೇ ಸಂಬಂಧಿಸಿದ ಮತದಾರರು ವಿಚಾರಣೆಗೆ ಹಾಜರಾಗಬೇಕಾದ ಸ್ಥಳ ಮತ್ತು ದಿನಾಂಕವನ್ನು ನಮೂದಿಸಲಾಗಿದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು, ನಿಗದಿತ ಕಾಲಮಿತಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ನೋಟಿಸ್ ಪಡೆದಿರುವ ಮತದಾರರು ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನೋಟಿಸ್‌ನಲ್ಲಿ ತಿಳಿಸಿ ರುವ ದಿನಾಂಕ ಹಾಗೂ ಸ್ಥಳದಲ್ಲಿ ವಿಚಾರಣೆಗೆ ಹಾಜರಾಗಿ, ತಮ್ಮ ಬಳಿ ಲಭ್ಯವಿರುವ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆಗಳ ಪರಿಶೀಲನೆಯ ನಂತರ ಅರ್ಹತೆ ದೃಢಪಟ್ಟಲ್ಲಿ ನಿಯಮಾನುಸಾರ ಮತದಾರರ ಪಟ್ಟಿಯಲ್ಲಿ ಹೆಸರು ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವ ಕುಮಾರ್ ಮಾತನಾಡಿ, ಎಸ್‌ಐಆರ್‌ನಲ್ಲಿ ಸ್ವೀಕರಿಸಲಾಗಿರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಬೇಕು. ಅಗತ್ಯವಿರುವ ಪ್ರಕರಣಗಳಲ್ಲಿ ವಿಚಾರಣೆ ನಡೆಸಿ ವಾಸ್ತವಾಂಶಗಳನ್ನು ದೃಢಪಡಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.