ಸಂಸದ ಪಿ.ಸಿ. ಮೋಹನ್ ಗುರುವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಮೈಸೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ತಯಾರಾದ ‘ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಸರ್ಕಾರ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಬೇಕು ಎಂದು ಸಂಸದ ಪಿ.ಸಿ. ಮೋಹನ್ ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಿಂದುಳಿದ ವರ್ಗಗಳಿಗೆ ನಿರಂತರ ಅನ್ಯಾಯವಾಗಿದೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ 600 ಕೋಟಿ ರೂ. ಸಾರ್ವಜನಿಕ ಹಣವನ್ನು ವಿವಿಧ ಆಯೋಗಗಳ ಹೆಸರಿನಲ್ಲಿ ಖರ್ಚು ಮಾಡಿದರೂ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಲಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಬಿಹಾರ ಹಾಗೂ ತೆಲಂಗಾಣ ಸರ್ಕಾರ ಕೇವಲ ಒಂದೇ ವರ್ಷದಲ್ಲಿ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಿ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದೆ. ಆದರೆ ಕರ್ನಾಟಕದಲ್ಲಿ ಹತ್ತು ವರ್ಷಗಳಾದರೂ ಕಾಂಗ್ರೆಸ್ ಕೇವಲ ಕಾಲಹರಣ ಮಾಡಿದೆ. ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಗಂಡಾಂತರ ಎದುರಾದಾಗಲೆಲ್ಲಾ ಹಿಂದುಳಿದ ವರ್ಗಗಳ ಜಾತಿ ಗಣತಿಯ ಕಾರ್ಡ್ ಪ್ಲೇ ಮಾಡುತ್ತಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದು, ಅವರು ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ, ವಿಭಾಗ ಪ್ರಭಾರಿ ಸ್ವಾಮಿ ಮರಳಪುರ ಹಾಗೂ ಇತರರು ಇದ್ದರು.