ಅಮಾನತುಗೊಂಡ ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ ನಡೆಯಿತು. ಎಸ್.ಮಂಜುನಾಥ್, ಬಿ.ಮಂಜುನಾಥ್, ಬಿ.ಕೆ.ಸಿದ್ದರಾಜು, ಎ.ಪಿ.ರಮೇಶ, ಪಿ.ಸುಬ್ರಹ್ಮಣ್ಯ, ಪಳನಿ ಇನ್ನಿತರರಿದ್ದರು. 
ಮೈಸೂರು

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹಿಸಿ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತಹಸೀಲ್ದಾರ್ ಮೀನಮೇಷ
  • ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸಿದ ತಪ್ಪಿತಸ್ಥ ನೌಕರರ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ

ಮೈಸೂರು: 

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಂಚ್ಯಾ ಗ್ರಾಮದಲ್ಲಿ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಖರಾಬು ಜಾಗಕ್ಕೆ ಅಕ್ರಮವಾಗಿ ಖಾತೆ ಮಾಡಿಕೊಟ್ಟು ಅಮಾನತುಗೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ  ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಹಂಚ್ಯಾ ಗ್ರಾಮದ ಸರ್ವೇ ಸಂಖ್ಯೆ 292ರಲ್ಲಿದ್ದ ಸರ್ಕಾರಿ ಖರಾಬು ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಳ್ಳಲು ಅನುವು ಮಾಡಿಕೊಟ್ಟಿದ್ದು, ಜತೆಗೆ, ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವುದು ಸಹ ತನಿಖೆಯಲ್ಲಿ ದೃಢವಾಗಿದೆ. 
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಫಾರಸಿನ ಮೇರೆಗೆ ಇವರನ್ನು ಈಗಾಗಲೇ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆದರೆ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತಹಸೀಲ್ದಾರ್ ಮೀನಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸಿದ ತಪ್ಪಿತಸ್ಥ ನೌಕರರ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತಹಸೀಲ್ದಾರ್‌ಗೆ  ಸ್ಪಷ್ಟ ನಿರ್ದೇಶನವಿದೆ. ಆದರೆ, ಕಳೆದ ಜುಲೈ 30ರಂದೇ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ, ತಹಸೀಲ್ದಾರ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ನಿರ್ದೇಶಕರ ವರದಿ ನಿರ್ಲಕ್ಷಿಸಿ, ತಪ್ಪಿತಸ್ಥ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದೂ ದೂರಿದರು.

ನಾಲ್ಕೂ ಜನ ಅಮಾನತುಗೊಂಡ ನೌಕರರ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಸಂಚಾಲಕರಾದ ಎಸ್.ಮಂಜುನಾಥ್, ಬಿ.ಮಂಜುನಾಥ್, ಬಿ.ಕೆ.ಸಿದ್ದರಾಜು, ಎ.ಪಿ.ರಮೇಶ, ಪಿ.ಸುಬ್ರಹ್ಮಣ್ಯ, ಪಳನಿ  ಇನ್ನಿತರರಿದ್ದರು.