ಮಾರ್ಟಳ್ಳಿಯಲ್ಲಿ ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ಸಂಚಾರ ತಡೆ ನಡೆಸಿದರು.
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿನ ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಸೋಮವಾರ ಗ್ರಾಮಸ್ಥರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ 2 ಮದ್ಯದ ಅಂಗಡಿಗಳಿದ್ದು, ಇಲ್ಲಿನ ರಸ್ತೆಯ ಮೂಲಕ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ತೆರಳುತ್ತಾರೆ. ಸಂಚರಿಸುವ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಆದ್ದರಿಂದ ಮದ್ಯದ ಅಂಗಡಿಗಳನ್ನು ತೆರವುಗೊಳಿಸುವಂತೆ ಗ್ರಾಮದ ಮರುದ ಮತ್ತು ಭುವನ ದಂಪತಿ ಇಬ್ಬರು ಮಕ್ಕಳೊಂದಿಗೆ 2 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಯಾವುದೇ ಕ್ರಮವಾಗಲಿಲ್ಲ. ಹಾಗಾಗಿ ಇದಕ್ಕೆ ಕೆಲ ಗ್ರಾಮಸ್ಥರು ಬೆಂಬಲ ಸೂಚಿಸಿದ್ದು, ರಸ್ತೆಗೆ ಕಲ್ಲು ಹಾಗೂ ಮಂಚವನ್ನು ಇರಿಸಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟಿಸಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ತಾಪಂ ಇಒ ಉಮೇಶ್ ಮಾತನಾಡಿ, ತಹಸೀಲ್ದಾರ್ ಅವರು ಮಂಗಳವಾರ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಅಗತ್ಯ ಕ್ರಮವಹಿಸಲಿದ್ದಾರೆ. ಆದ್ದರಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.