ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುಚ್ಚಕ್ತಿ ಮಂಡಳಿ ನೌಕರರ ಯೂನಿಯನ್ ವತಿಯಿಂದ ಗುರುವಾರ ಮೈಸೂರು ನಗರದಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರು: ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ವಿದ್ಯುಚ್ಚಕ್ತಿ ಮಂಡಳಿ ನೌಕರರ ಯೂನಿಯನ್ ವತಿಯಿಂದ ವಿಜಯನಗರ 2ನೇ ಹಂತದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಇಂಧನ ಇಲಾಖೆ ಜನರ ಆಸ್ತಿಯಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ಖಾಸಗೀಕರಣಗೊಳಿಸಬಾರದು. ಅನ್ನದಾತರಾದ ರೈತರಿಗೆ ಹಾಗೂ ಗ್ರಾಹಕರಿಗೆ ಅನ್ಯಾಯ ಮಾಡಿ ಅಧಿವೇಶನದಲ್ಲಿ ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಲಾಯಿತು.
ಇಂಧನ ಇಲಾಖೆಯನ್ನು ಖಾಸಗೀಕರಣಗೊಳಿಸಬೇಕೆಂಬ ನಿರ್ಧಾರ ನಮ್ಮ ಸಂಸ್ಥೆಯ ಭವಿಷ್ಯ, ನೌಕರರ ಹಿತಾಸಕ್ತಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದರಿಂದ ವಿದ್ಯುತ್ ಗ್ರಾಹಕರು, ರೈತರು, ನೌಕರರು, ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಇದರಿಂದ ಗೃಹ ಮತ್ತು ಕೃಷಿ ಬಳಕೆದಾರರಿಗೆ ಕೈಗೆಟುಕುವ ದರದಲ್ಲಿ ವಿದ್ಯುತ್ ಸರಬರಾಜಿನ ಮೇಲೆ ತೀವ್ರ ಪರಿಣಾಮ ಉಂಟು ಮಾಡಲಿದೆ ಎಂದು ಸಂಘದ ಪದಾಧಿಕಾರಿಗಳು ಕಳವಳ ವ್ಯಕ್ತಪಡಿಸಿದರು.
ಪ್ರತಿಭಟನೆಯ ಬಳಿಕ ಸೆಸ್ಕ್ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕಿ ಡಾ.ಬಿ.ಆರ್.ರೂಪಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.