ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ವಿರುದ್ಧ ವೀರಶೈವ ಲಿಂಗಾಯತ ವೇದಿಕೆ ಮತ್ತು ಮಹಿಳಾ ಘಟಕದಿಂದ ಬುಧವಾರ ಮೈಸೂರು ನಗರದಲ್ಲಿ ಪ್ರತಿಭಟನೆ ನಡೆಯಿತು. 
ಮೈಸೂರು

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಗುರವಾದ ಹೇಳಿಕೆ ನೀಡಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ಮತ್ತು ಮಹಿಳಾ ಘಟಕದ ವತಿಯಿಂದ ಗನ್‌ಹೌಸ್ ಬಳಿಯ ಬಸವ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ಲಿಂಗಾಯತ ಧರ್ಮ ಹಾಗೂ ಮರ್ಯಾದೆ ಹತ್ಯೆ ವಿಚಾರವನ್ನು ನಾಗಲಕ್ಷ್ಮೀ ಚೌದರಿ ಪ್ರಸ್ತಾಪಿಸಿ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಒಂದು ಸಮುದಾಯ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ಅಲ್ಲದೆ ಅವರಿಗೆ ಲಿಂಗಾಯತ ಧರ್ಮದ ಬಗ್ಗೆ ಸರಿಯಾಗಿ ಮಾಹಿತಿಯೇ ಇಲ್ಲ. ಏನೂ ತಿಳಿಯದೆ ಈ ರೀತಿ ಮಾತನಾಡಿ ಲಿಂಗಾಯತ ಸಮುದಾಯದವರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಮಹಿಳಾ ಆಯೋಗದ ಅಧ್ಯಕ್ಷೆ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾದ ಮಹೇಶ್ ಕುಮಾರ್, ತೇಜಸ್ವಿ ನಾಗಲಿಂಗಸ್ವಾಮಿ ಹಾಗೂ ಇತರರು ಪಾಲ್ಗೊಂಡಿದ್ದರು.