ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸರಳ ವಿವಾಹ ಪ್ರೋತ್ಸಾಹಧನ ಯೋಜನೆಯ ಅನುಷ್ಠಾನ ಸಭೆ ನಡೆಯಿತು. 
ಮೈಸೂರು

ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ 50 ಸಾವಿರ ಪ್ರೋತ್ಸಾಹ ಧನ

ಪ್ರಮುಖ ಮುಖ್ಯಾಂಶಗಳು

  • ಸರಳವಿವಾಹ ಯೋಜನೆ ಅನುಷ್ಠಾನಕ್ಕೆ ಮೈಸೂರಿನಲ್ಲಿ ಸಭೆ
  • ಅರ್ಹ ಫಲಾನುಭವಿಗಳನ್ನು ಗುರುತಿಸಲು ಶಾಸಕ ತನ್ವೀರ್ ಸೇಠ್ ನಿರ್ದೇಶನ
ಮೈಸೂರು: ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000 ರೂ. ಸಹಾಯಧನ ನೀಡಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸರಳ ವಿವಾಹ ಪ್ರೋತ್ಸಾಹಧನ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಗೆ 150 ಗುರಿ ಸರಳ ವಿವಾಹದ ಗುರಿ ನಿಗದಿ ಮಾಡಲಾಗಿದ್ದು, ಯೋಜನೆಗೆ ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು ಹಾಗೂ ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಯಾವುದೇ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಈ ಯೋಜನೆಗಾಗಿ ಫಲಾನುಭವಿಗಳನ್ನು ಗುರುತಿಸಲು ಹೆಚ್ಚಿನ ಶ್ರಮ ವಹಿಸಿ ಕೆಲಸ ನಿರ್ವಹಿಸಬೇಕು. ತಂದೆ ಅಥವಾ ತಾಯಿ ಇಲ್ಲದ ವಧುವನ್ನು ಗುರುತಿಸಿ ಸರಳ ವಿವಾಹ ಯೋಜನೆಯ ಸವಲತ್ತು ಒದಗಿಸಿದರೆ ಯೋಜನೆ ಹೆಚ್ಚಿನ ಸಾರ್ಥಕತೆ ಪಡೆಯುತ್ತದೆ ಎಂದು ಹೇಳಿದರು.
ಅಲ್ಪಸಂಖ್ಯಾತ ಸಮುದಾಯದಡಿ ಬರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್‌ಹಾಗೂ ಪಾರ್ಸಿ ಅವರಿಗೆ ಸರಳ ವಿವಾಹ ಯೋಜನೆಯಡಿ ಗುರಿ ನಿಗದಿ ಮಾಡಿ ಅರ್ಜಿ ಆಹ್ವಾನಿಸಿ ಹೆಚ್ಚಿನ ಪ್ರಚಾರ ನೀಡಬೇಕು. ಕೆಲವು ಸಮುದಾಯದಿಂದ ಅರ್ಜಿ ಬಾರದೆ ಇದ್ದಲ್ಲಿ ನಂತರ ಬೇರೆ ಸಮುದಾಯಕ್ಕೆ ಹೆಚ್ಚುವರಿಯಾಗಿ ನೀಡುವುದು ಉತ್ತಮ ಎಂದು ಸಲಹೆ ನೀಡಿದರು.
ಸರಳ ವಿವಾಹ ಯೋಜನೆಯಡಿ ಅರ್ಜಿ ಸ್ವೀಕೃತಿಯಾದ ನಂತರ ವಧು ಹಾಗೂ ವರ ನೀಡಿರುವ ವಯಸ್ಸಿನ ದಾಖಲಾತಿಗಳನ್ನು ಪರಿಶೀಲಿಸಿ ಹಾಗೂ ಅವರು ವಾಸವಿರುವ ಸ್ಥಳಕ್ಕೆ ಭೇಟಿ ನೀಡಿ ವರನಿಗೆ ಜೀವಂತ ಪತ್ನಿ ಹಾಗೂ ವಧುವಿಗೆ ಜೀವಂತ ಪತಿ ಇಲ್ಲದಿರು ವುದನ್ನು ಖಾತ್ರಿ ಪಡಿಸಿಕೊಂಡು ನಂತರ ಯೋಜನೆಯ ಸೌಲಭ್ಯ ಒದಗಿಸಿಕೊಡಿ ಎಂದರು.
ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ವಯೋಮಿತಿಯ ಬಗ್ಗೆ ಪರಿಶೀಲಿಸುವಾಗ ಕಡ್ಡಾಯವಾಗಿ ಎಸ್‌ಎಸ್‌ಎಲ್ಸಿ ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರವನ್ನು ಪರಿಶೀಲಿಸಬೇಕು. ವಿವಾಹದ ನೊಂದಣಿಗೆ ನೊಂದಣಾಧಿಕಾರಿಗಳ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ವಿವಾಹದ ಸಂದರ್ಭದಲ್ಲಿ ನೊಂದಣಿಗೆ ಕ್ರಮ ಕೈಗೊಳ್ಳಿ ಎಂದು ಹೇಳಿದರು
ಸಭೆಯಲ್ಲಿ ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್. ನಿರ್ಮಲಾ ಹಾಗೂ ಇತರರು ಇದ್ದರು.