ನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರೇರಣಾ ಶಿಬಿರವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಿದರು. ಡಾ.ಭಾಮಿ ಶೆಣೈ, ಪಿ.ವಿಶ್ವನಾಥ್, ಬಿ.ಕೆ.ಬಸವರಾಜು, ಪುಷ್ಪವಲ್ಲಿ, ಎಸ್.ಶಿವಲಿಂಗಯ್ಯ ಇತರರಿದ್ದರು. 
ಮೈಸೂರು

ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್- ಗೈಡ್ಸ್ ಸಹಕಾರಿ

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅಭಿಮತ

ಮೈಸೂರು: 

ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದೊಂದಿಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಆದ್ದರಿಂದ  ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರೂ ಆದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾಮಟ್ಟದ ಪ್ರೇರಣಾ ಶಿಬಿರದಲ್ಲಿ ಮಾತನಾಡಿದರು.
 ಆರಂಭದಲ್ಲಿ ಸ್ಕೌಟ್ಸ್-ಗೈಡ್ಸ್ ಚಳವಳಿ ಬ್ರಿಟಿಷ್ ಮಕ್ಕಳಿಗೆ ಮಾತ್ರ ಸೀಮಿತವಾಗಿತ್ತು. ಬಳಿಕ ಕೆಲವೇ ವರ್ಷಗಳಲ್ಲಿ ಎಲ್ಲ ವರ್ಗದ ಮಕ್ಕಳಿಗೂ ಅವಕಾಶ ಕಲ್ಪಿಸಲಾಯಿತು. ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಈ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಸಹ ಇದರಲ್ಲಿ ಸಕ್ರಿಯವಾಗಬೇಕು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಸಾಹಸ ಪ್ರಜ್ಞೆ, ಪರಿಸರ ಪ್ರಜ್ಞೆ ಮೂಡಲಿದೆ. ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವು ಬೆಳೆಯಲಿದೆ. ಪರಿಸರ ಉಳಿಸಿ-ಬೆಳೆಸುವ ಕಾರ್ಯಕ್ಕೆ ಮಕ್ಕಳನ್ನು ಉತ್ತೇಜಿಸಬೇಕು ಎಂದರು
ಸುಂದರ ಬದುಕು, ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶಿಸ್ತು, ಕೌಶಲದ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹ ಕಲಿಯುವುದರ ಜತೆಗೆ ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರಿಸುವ ಕಾರ್ಯಕ್ರಮ ಹೆಚ್ಚಾಗಿ ನಡೆಯಬೇಕಿದೆ ಎಂದು ಹೇಳಿದರು.
ಮೈಸೂರು ಗ್ರಾಹಕರ ಪರಿಷತ್ತಿನ ಡಾ.ಭಾಮಿ ಶೆಣೈ ಮಾತನಾಡಿ, ಪ್ರತಿಯೊಬ್ಬರೂ ಸಮಾಜಕ್ಕೆ ತಮ್ಮಿಂದ ಏನು ಕೊಡುಗೆ ನೀಡಬಹುದು ಎಂಬುದನ್ನು ಚಿಂತಿಸಬೇಕು. ಸಣ್ಣ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕವೂ ಸಮಾಜದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದರು.
ಸಾರ್ವಜನಿಕ ರಸ್ತೆಗಳು, ಸ್ಥಳಗಳು ಎಲ್ಲರಿಗೂ ಸೇರಿವೆ. ಅವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಾಗರಿಕನ ಜವಾಬ್ದಾರಿ. ಈ ಬಗ್ಗೆ ವಿದ್ಯಾರ್ಥಿಗಳು, ಯುವಜನರು ಜಾಗೃತಿ ಮೂಡಿಸಬೇಕು. ಎಲ್ಲೆಂದರಲ್ಲಿ ಕಸ ಬಿಸಾಡದಿರುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು. 
ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಕಸ ಬಿಸಾಡುವುದನ್ನು ಕಂಡರೆ, ಧೈರ್ಯದಿಂದ ಅವರಿಗೆ ತಿಳಿಹೇಳಬೇಕು. ತಿಳಿಹೇಳಿದ ಬಳಿಕವೂ ಕಸ ಬಿಸಾಡುತ್ತಿದ್ದರೆ, ಅದರ ಛಾಯಾಚಿತ್ರ ತೆಗೆದು ನಗರಪಾಲಿಕೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬಹುದು ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಬಹುದು ಎಂದು ಸಲಹೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಪಿ.ವಿಶ್ವನಾಥ್, ರಾಜ್ಯ ಸಂಸ್ಥೆಯ ಬಿ.ಕೆ.ಬಸವರಾಜು, ಜಿಲ್ಲಾ ಆಯುಕ್ತರಾದ ಪುಷ್ಪವಲ್ಲಿ, ಜಿಲ್ಲಾ ಕಾರ್ಯದರ್ಶಿ ಎಸ್.ಶಿವಲಿಂಗಯ್ಯ ಇತರರಿದ್ದರು.