ತಿ.ನರಸೀಪುರ ತಾಲೂಕಿನ ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಕಸಬಾ ಹೋಬಳಿಮಟ್ಟದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ಚಾಲನೆ ನೀಡಿದರು. ನಾಗೇಶ್ ಗಂಗವಾಡಿ, ಎಂ.ವಿ.ಶಿವಶಂಕರಮೂರ್ತಿ, ಎ.ಗಜೇಂದ್ರ, ಮಹದೇವಸ್ವಾಮಿ, ಪರಶಿವಮೂರ್ತಿ, ಎ.ಎಸ್.ಮಹೇಶ್ ಇತರರು ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ಅಭಿಮತ
ತಿ.ನರಸೀಪುರ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಶಕ್ತಿ ವೃದ್ಧಿಯಾಗುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ಶಿವಮೂರ್ತಿ ಹೇಳಿದರು.
ತಾಲೂಕಿನ ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಬುಧವಾರ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆಯ ದೈಹಿಕ ಶಿಕ್ಷಣ ವಿಭಾಗ ಹಾಗೂ ಮುತ್ತತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಆಯೋಜಿಸಿದ್ದ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬಾಲ್ಯದಿಂದಲೇ ಕ್ರೀಡೆಯನ್ನು ತಮ್ಮ ದೈನಂದಿನ ಚಟುವಟಿಕೆಯಾಗಿ ರೂಢಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು. ದೈಹಿಕ ಸದೃಢತೆಯ ಜತೆಗೆ ಮಾನಸಿಕ ಸಾಮರ್ಥ್ಯವೂ ಹೆಚ್ಚುತ್ತದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. 14 ಮತ್ತು 17 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾಗುವ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳನ್ನು ಕ್ರೀಡಾಕೂಟಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ದೈಹಿಕ ಶಿಕ್ಷಕರು ಉತ್ತಮ ತರಬೇತಿ ಹಾಗೂ ಸೂಕ್ತ ಮಾರ್ಗದರ್ಶನ ನೀಡಬೇಕು ಎಸ್.ಸಿ.ಶಿವಮೂರ್ತಿ ತಿಳಿಸಿದರು.
ಕ್ರೀಡಾ ಜ್ಯೋತಿ ಸ್ವೀಕರಿಸಿದ ವಿಶ್ವಕಪ್ ವಿಜೇತ ಖೋ ಖೋ ಕ್ರೀಡಾಪಟು ಚೈತ್ರಾ ಮಾತನಾಡಿ, ನನ್ನ ಸ್ವಗ್ರಾಮ ಕುರುಬೂರಿನ ಶಾಲೆಯ ಸಣ್ಣ ಅಂಗಳದಲ್ಲಿಯೇ ಖೋ ಖೋ ಅಭ್ಯಾಸ ಆರಂಭಿಸಿದ್ದೆ. ನಿರಂತರ ಪರಿಶ್ರಮದ ಫಲವಾಗಿ ನಂತರ ರಾಷ್ಟ್ರ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶ ದೊರೆಯಿತು. ಹೀಗಾಗಿ ಕ್ರೀಡಾಪಟುಗಳು ವೇದಿಕೆ ಸಣ್ಣದಾಗಲಿ ಅಥವಾ ದೊಡ್ಡದಾಗಲಿ ಎಂಬ ಭೇದ ಮಾಡದೆ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಸಣ್ಣ ಪ್ರಯತ್ನವೂ ಮುಂದೊಂದು ದಿನ ಉತ್ತಮ ಫಲಿತಾಂಶಕ್ಕೆ ಕಾರಣವಾಗಬಹುದು ಎಂದರು.
ಕಾರ್ಯಕ್ರಮದಲ್ಲಿ ಬಿಆರ್‌ಸಿ ನಾಗೇಶ್ ಗಂಗವಾಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ಎ.ಗಜೇಂದ್ರ, ನಿರ್ದೇಶಕ ಮಹದೇವಸ್ವಾಮಿ, ದೈಹಿಕ ಶಿಕ್ಷಣ ಪರಿವೀಕ್ಷಕ ಪರಶಿವಮೂರ್ತಿ, ಇಸಿಒ ರಮೇಶ್, ಸಿಆರ್‌ಪಿಗಳಾದ ಶ್ರೀಧರ್, ರೇಖಾ, ಭಾಸ್ಕರ್, ಮುತ್ತತ್ತಿ ಶಾಲೆಯ ಮುಖ್ಯ ಶಿಕ್ಷಕ ಎ.ಎಸ್.ಮಹೇಶ್, ಗ್ರಾಪಂ ಮಾಜಿ ಅಧ್ಯಕ್ಷ ಆನಂದ್, ಮುಖ್ಯಶಿಕ್ಷಕ ಶಿವಣ್ಣ ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.