ಮೈಸೂರು: ಗ್ರಾಮ ಸಡಕ್ ಸೇರಿದಂತೆ ಯಾವುದೇ ಯೋಜನೆಗೆ ಅನುದಾನದ ಕೊರತೆ ಇಲ್ಲ. ಆದರೆ, ರಾಜ್ಯದ ಮುಖ್ಯಮಂತ್ರಿ ಕೇಂದ್ರ ಬಳಿ ಹೋಗಿ ಅನುದಾನ ಪಡೆಯಲು ವಿಫಲರಾಗಿದ್ದಾರೆ ಎಂದು ಸಂಸದ ಯದುವೀರ್ ಟೀಕಿಸಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮೇಕೆದಾಟು ವಿಚಾರವಾಗಿ ಇತ್ತೀಚೆಗೆ ಪ್ರಧಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಈ ವಿಚಾರವಾಗಿ ಆಸಕ್ತಿ ತೋರುತ್ತಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಅಲ್ಲಿನ ಮುಖ್ಯಮಂತ್ರಿ ಪ್ರಧಾನಿಯನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಧಿಕಾರವದಲ್ಲಿ ಇಂತಹ ಯಾವುದೇ ಪ್ರಯತ್ನ ಮಾಡದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದರೂ ಸಕಾರಾತ್ಮಕವಾಗಿ ಮುಂದುವರೆಯಲಿ ಎಂದರು.
ಭೂಮಿ ನೀಡದ ರಾಜ್ಯ ಸರ್ಕಾರ: ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಎಐ ನವೋದ್ಯಮಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಗೆ ಕಾರ್ಯನಿರ್ವವಹಿಸಲು ವಿಶಾಲವಾದ ಜಾಗದ ಅವಶ್ಯಕತೆ ಇದೆ. ಆದರೆ, ರಾಜ್ಯ ಎಐ ನವೋದ್ಯಮಗಳಿಗೆ ಜಾಗ ನೀಡುವ ಸಲುವಾಗಿ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣ. ರಾಜ್ಯ ಸರ್ಕಾರ ಹಾಲು ಸೇರಿದಂತೆ ಎಲ್ಲ ಅಗತ್ಯ ಉತ್ಪನ್ನಗಳ ಬೆಲೆ ಏರಿಕೆ ಮಾಡಿದೆ. ದೇಶದಲ್ಲಿ ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಎಸ್‌ಟಿಯಿಂದ ಜನರಿಗೆ ಅನುಕೂಲವಾಗಿದೆ. ಈ ಹಿಂದೆ ಹಲವಾರು ತೆರಿಗೆಗಳು ಇತ್ತು, ಅದಕ್ಕೆಲ್ಲ ಕಡಿವಾಣ ಹಾಕಿ ಜಿಎಸ್‌ಟಿ ಜಾರಿಗೆ ತರಲಾಗಿದೆ ಎಂದರು.