ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಬರುವ ಕುವೆಂಪು ನಗರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸಚಿವ ಶಿವರಾಜ್ ಎಸ್. ತಂಗಡಗಿ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ ವಿದ್ಯಾರ್ಥಿನಿಲಯಕ್ಕೆ ಭೇಟಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಾರ್ಡನ್‌ಗಳು ಹಾಸ್ಟೆಲ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸುವುದು ಕಡ್ಡಾಯ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳನ್ನು ಅಮಾನತುಗೊಳಿಸುವುದಾಗಿ ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಬರುವ ಕುವೆಂಪುನಗರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಚಿವರು ಬುಧವಾರ ದಿಢೀರ್ ಭೇಟಿ ನೀಡಿ, ಹಾಸ್ಟೆಲ್‌ನ ಕೊಠಡಿಗಳು, ಅಡುಗೆಮನೆ, ಊಟದ ವ್ಯವಸ್ಥೆ, ಕುಡಿಯುವ ನೀರು, ಶೌಚಗೃಹ, ಗ್ರಂಥಾಲಯ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯಗಳನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಪ್ರತಿನಿತ್ಯ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಹಾಸ್ಟೆಲ್‌ನ ನಿರ್ವಹಣೆ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಮೂಲ ಸೌಲಭ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ವಿದ್ಯಾರ್ಥಿಗಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹಾಸ್ಟೆಲ್‌ಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ, ಅವ್ಯವಸ್ಥೆ ಅಥವಾ ಗುಣಮಟ್ಟದ ಕೊರತೆ ಸಹಿಸುವುದಿಲ್ಲ ಎಂದರು.
ವಾರ್ಡನ್‌ಗಳು ಮಕ್ಕಳೊಂದಿಗೆ ಊಟ ಮಾಡಿದಾಗ ಮಾತ್ರ ಅವರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹೇಗಿದೆ ಎಂಬುದು ಖುದ್ದಾಗಿ ತಿಳಿಯಲಿದೆ. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ತಿಂಗಳುಗಟ್ಟಲೆ ಪಾಲಕರನ್ನು ಬಿಟ್ಟು ಶಿಕ್ಷಣಕ್ಕಾಗಿ ಹಾಸ್ಟೆಲ್‌ನಲ್ಲಿ ಉಳಿಯುವ ಮಕ್ಕಳಿಗೆ ವಾರ್ಡನ್‌ಗಳು ಪಾಲಕರ ಸ್ಥಾನದಲ್ಲಿ ನಿಂತು ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶುಚಿತ್ವ ಕಿಟ್ ಒದಗಿಸಿ:
ಇನ್ನು ವಿದ್ಯಾರ್ಥಿಗಳ ರಕ್ಷಣೆಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಕಡ್ಡಾಯವಾಗಿ ಮಾಡಿಸಬೇಕು. ಶುಚಿತ್ವ ಕಿಟ್‌ಗಳನ್ನು ಸಮರ್ಪಕ ಮತ್ತು ಸರಿಯಾದ ಸಮಯಕ್ಕೆ ವಿತರಿಸಬೇಕು. ಸ್ವಚ್ಛತಾ ಕಿಟ್‌ಗಳ ವಿತರಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಈ ವೇಳೆ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಹಾಸ್ಟೆಲ್‌ನಲ್ಲಿ ದೊರೆಯುತ್ತಿರುವ ಸೌಲಭ್ಯ, ಊಟ, ಶುಚಿತ್ವ ಇನ್ನಿತರ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಖುದ್ದಾಗಿ ಮಾಹಿತಿ ಪಡೆದರು. ಇದಕ್ಕೂ ಮುನ್ನ ಸಚಿವರು ಸ್ಥಳದಲ್ಲಿದ್ದ ವಾರ್ಡನ್‌ಗಳನ್ನು ಹೊರಗೆ ಕಳುಹಿಸಿ ವಿದ್ಯಾರ್ಥಿಗಳ ಬಳಿ ಮಾಹಿತಿ ಪಡೆದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿದ್ಯಾ ವಾಹಿನಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಇದರಡಿ ಹಿರಿಯ ವಿದ್ಯಾರ್ಥಿಗಳು ಪಿಯುಸಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿಷಯಗಳಲ್ಲಿ ಟ್ಯೂಷನ್ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಇದೇ ವೇಳೆ ಸಚಿವರ ಗಮನಕ್ಕೆ ತಂದರು.