ಮೈಸೂರಿನಲ್ಲಿ ಕಂಡು ಬಂದ ಜಾನುವಾರುಗಳು
- 34 ವಾರಕ್ಕಾಗುವಷ್ಟು ದಾಸ್ತಾನು
- ನೀರಿನ ಸಮಸ್ಯೆ ಸದ್ಯಕ್ಕೆ ಇಲ್ಲ
ಜಿಲ್ಲೆಯಲ್ಲಿ ತಾಪಮಾನ ದಿನೇ ದಿನೆ ಏರಿಕೆಯಾಗುತ್ತಿದ್ದು, ಜಾನುವಾರುಗಳ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕೈಗೊಂಡ ಪೂರ್ವಭಾವಿ ಸಿದ್ಧತೆಯ ಪರಿಣಾಮ ಜಿಲ್ಲೆಯಲ್ಲಿ ಸದ್ಯಕ್ಕೆ ಮೇವಿನ ಕೊರತೆ ಕಂಡು ಬರುತ್ತಿಲ್ಲ.
ಜಿಲ್ಲೆಯಲ್ಲಿ ಪ್ರಸ್ತುತ 34 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ. ಒಂದುವೇಳೆ ಪರಿಸ್ಥಿತಿ ಕೈ ಮೇರಿ ಹೋದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಿದ್ಧತೆ ಕೈಗೊಂಡಿದೆ. ರೈತರು ಸಾಕಷ್ಟು ಪ್ರಮಾಣದಲ್ಲಿ ಭತ್ತ, ರಾಗಿ ಹುಲ್ಲು, ಜೋಳದ ಕಡ್ಡಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಇದರ ಜತೆಗೆ ರೈತರಿಗೆ ಈ ಹಿಂದೆ ನೀಡಿದ್ದ ಮೇವಿನ ಮರದ ಸಸಿಗಳನ್ನು ರೈತರು ತಮ್ಮ ಹೊಲದ ಬದುಗಳಲ್ಲಿ ಬೆಳೆಸಿದ್ದು, ಈ ಸಸಿಗಳು ಮರಗಳಾಗಿ ಬೆಳೆದು ನಿಂತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಸಿ ಮೇವು ಸಹ ಜಾನುವಾರುಗಳಿಗೆ ದೊರೆಯಲಿದೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪ್ರಸ್ತುತ ರೈತರ ಮನೆಗೆಳಿಗೆ ಭೇಟಿ ನೀಡಿ ಲಸಿಕಾ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಜತೆಗೆ ಮೇವು ಹಾಗೂ ನೀರಿನ ಕೊರತೆಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಯಾವುದೇ ಗ್ರಾಮದಲ್ಲಿ ಮೇವಿನ ಕೊರತೆ ಕಂಡು ಬಂದರೆ ತಕ್ಷಣ ಸ್ಪಂದಿಸಲು ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ರೈತರಿಗೆ ಇಲಾಖೆಯಿಂದ ಮೇವಿನ 1500 ಮಿನಿ ಕಿಟ್ ವಿತರಣೆ ಮಾಡಲಾಗಿದೆ.
ಬೇಸಿಗೆ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿ ತಂಪಾದ ವಾತಾವರಣ ನಿರ್ಮಾಣ ಮಾಡುವಂತೆ, ಬಿಸಿಲಿನಲ್ಲಿ ಜಾನುವಾರುಗಳನ್ನು ಮೇಯಿ ಸದಂತೆ ಹಾಗೂ ನೀರಿನ ತೊಟ್ಟಿಗಳನ್ನು ಶುಚಿಯಾಗಿ ಇಟ್ಟುಕೊಳ್ಳುವಂತೆ ರೈತರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.
ತೊಟ್ಟಿ ನಿರ್ಮಾಣ: ಜಾನುವಾರುಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂಬ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದ್ದು, ಈ ತೊಟ್ಟಿಗಳಿಗೆ ನೀರು ತುಂಬಿಸಿ ಜಾನುವಾರುಗಳಿಗೆ ನೀರು ಒದಗಿಸುವ ಕಾರ್ಯ ನಡೆಯುತ್ತಿದೆ.
ನೀರಿನ ಸಮಸ್ಯೆ ನಿಭಾಯಿಸಲು ಸಿದ್ಧತೆ: ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳದಂತೆ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ನಿರ್ದೇಶನ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಗ್ರಾಮಗಳನ್ನು ಗುರುತಿಸಿ ತಕ್ಷಣ ಕೊಳವೆಬಾವಿ ಕೊರೆಸುವ ಹಾಗೂ ಕೊಳವೆ ಬಾವಿ ದುರಸ್ತಿ ಮಾಡುವ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸದ್ಯಕ್ಕೆ ಯಾವುದೇ ಗ್ರಾಮಗಳಿಗೂ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗದೆ ಇದ್ದರೂ ಬಿಸಿಲಿನ ತಾಪಮಾನ ಹೆಚ್ಚಾದರೆ ಏಪ್ರಿಲ್ ತಿಂಗಳಿನಿಂದ ಕೆಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಳ್ಳದಂತೆ ಕ್ರಮ ವಹಿಸಲು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.
ಜಾನುವಾರುಗಳ ವಿವರ: ಜಿಲ್ಲೆಯಲ್ಲಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಸೇರಿದಂತೆ ಒಟ್ಟು 9,33,298 ಜಾನುವಾರುಗಳು ಇವೆ. ಮೈಸೂರು ತಾಲೂಕಿನಲ್ಲಿ 1,45,809 ನಂಜನಗೂಡಿನಲ್ಲಿ 1,67,465, ಕೆ.ಆರ್. ನಗರದಲ್ಲಿ 1,32,613, ಹುಣಸೂರಿನಲ್ಲಿ 1,16,616, ಪಿರಿಯಾಪಟ್ಟಣ 1,16,365, ತಿ.ನರಸೀಪುರದಲ್ಲಿ 1,18,199, ಎಚ್.ಡಿ. ಕೋಟೆಯಲ್ಲಿ 91,032, ಸರಗೂರು ತಾಲೂಕಿನಲ್ಲಿ 45,199 ಜಾನುವಾರುಗಳು ಇವೆ.
ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೇವು ದಾಸ್ತಾನು ಇದೆ. ಪ್ರಸ್ತುತ ಜಿಲ್ಲೆಯಲ್ಲಿ 34 ವಾರಕ್ಕೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ. ಜಾನುವಾರುಗಳಿಗೆ ಹಸಿ ಮೇವು ದೊರೆಯುವಂತೆ ಮಾಡಲು ಮೇವಿನ ಕಿಟ್‌ಗಳನ್ನು ರೈತರಿಗೆ ವಿತರಣೆ ಮಾಡಲಾಗಿದೆ. ಅಲ್ಲದೆ ಈ ಹಿಂದೆ ನೀಡಿದ ಮೇವಿನ ಸಸಿಗಳು ಮರಗಳಾಗಿ ಬೆಳೆದಿದ್ದು, ಆ ಮರಗಳಿಂದ ಮೇವು ದೊರೆಯುತ್ತದೆ. ಪ್ರಸಕ್ತ ವರ್ಷ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಸುರಿದ ಉತ್ತಮ ಮಳೆಯಿಂದ ಜಿಲ್ಲೆಯಲ್ಲಿ ಹಸಿರು ಕಾಣಿಸಿಕೊಂಡಿರುವುದು ವರದಾನವಾಗಿದೆ. ಸದ್ಯದ ಮಟ್ಟಿಗೆ ಕುಡಿಯುವ ನೀರಿನ ಸಮಸ್ಯೆ ಸದ್ಯದ ಮಟ್ಟಿಗೆ ಕಂಡು ಬಂದಿಲ್ಲ. ಇಲಾಖೆ ಅಧಿಕಾರಿಗಳು ಪ್ರತಿ ರೈತರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ರೈತರಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ.
ಸಿ.ನಾಗರಾಜು, ಉಪ ನಿರ್ದೇಶಕ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ