ಮೈಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕರು ಹಾಗೂ ವಿವಿಧ ಅಧಿಕಾರಿಗಳೊಡನೆ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಸಿ.ಶಂಕರ ಅಂಕನಶೆಟ್ಟಿಪುರ, ಸಿ.ಕೃಷ್ಣ, ಜನಾರ್ದನ್, ಸುರೇಶ್ ಇದ್ದರು. 
ಮೈಸೂರು

ಪೌರಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಸಿ.ಶಂಕರ ಅಂಕನಶೆಟ್ಟಿಪುರ

ಪ್ರಮುಖ ಮುಖ್ಯಾಂಶಗಳು

  • ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು
  • ಮಾಸಿಕ ಕನಿಷ್ಠ ವೇತನ ದೊರೆಯುವಂತೆ ನೋಡಿಕೊಳ್ಳಬೇಕು
ಮೈಸೂರು:ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುವ ಪೌರಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ತಿಳಿಸಿದರು.
ಮೈಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕರು ಹಾಗೂ ವಿವಿಧ ಅಧಿಕಾರಿಗಳೊಡನೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮದ ಪ್ರತೀ ಬೀದಿಗಳನ್ನು ಸ್ವಚ್ಛಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವವಾಗಿದೆ. ಅವರಿಂದಲೇ ನಾವೆಲ್ಲರೂ ಆರೋಗ್ಯವಾಗಿದ್ದೇವೆ. ಆದ್ದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುವ ಪೌರಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಹೇಳಿದರು.
ಪೌರಕಾರ್ಮಿಕರ ಎಲ್ಲ ಸಂಕಷ್ಟಗಳಿಗೆ ಆಯೋಗವು ನ್ಯಾಯ ದೊರಕಿಸಿಕೊಡಲಿದ್ದು, ಎಲ್ಲಿಯೂ ಅನ್ಯಾಯವಾದರೆ ಆಯೋಗವು ಸದಾ ಅವರ ಬೆನ್ನಿಗೆ ನಿಲ್ಲಲಿದೆ. ಆದ್ದರಿಂದ ಸರ್ಕಾರದ ನಿಯಮದ ಪ್ರಕಾರ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸವಲತ್ತು ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪೌರಕಾರ್ಮಿಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು. ನಾನು ಪೌರಕಾರ್ಮಿಕರ ಮಗನಾಗಿದ್ದು, ಶಿಕ್ಷಣದಿಂದಲೇ ಈ ಪದವಿಯಲ್ಲಿದ್ದೇನೆ. ಇದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವೂ ಕಾರಣ ಎಂದರು.
ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯಡಿ ಪೌರಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ ದೊರೆಯುವಂತೆ ನೋಡಿಕೊಳ್ಳಬೇಕು. ಆರೋಗ್ಯದ ಹಿತದೃಷ್ಟಿಯಿಂದ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಕರ್ತವ್ಯದ ಸಂದರ್ಭದಲ್ಲಿ ಮಾಸ್ಕ್, ಗ್ಲೌಸ್ ಸೇರಿದಂತೆ ಸುರಕ್ಷಾ ಪರಿಕರಗಳನ್ನು ಒದಗಿಸಿಕೊಡಬೇಕು ಎಂದು ಸೂಚಿಸಿದರು.
ಮಧ್ಯವರ್ತಿಗಳು, ಸಂಘ-ಸಂಸ್ಥೆಗಳಲ್ಲಿ ಕೆಲವರು ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಹಣಕ್ಕೆ ಬೇಡಿಕೆಯಿಟ್ಟರೆ ಆಯೋಗಕ್ಕೆ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಪೌರಕಾರ್ಮಿಕರು ದೂರು ನೀಡಬೇಕು. ಕೆಲಸದ ಅಗತ್ಯವಿದ್ದರೆ ನೇರವಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಬೇಕು ಎಂದು ಸಲಹೆ ನೀಡಿದರು.
ಮೈಸೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಮಾತನಾಡಿ, ಸರ್ಕಾರದ ನಿರ್ದೇಶನದ ಪ್ರಕಾರ ಯಾವುದೇ ಸಿಬ್ಬಂದಿ ಗ್ರಾಮ ಪಂಚಾಯಿತಿ ನೇಮಕ ಮಾಡಿಕೊಳ್ಳುವುದಿಲ್ಲ. ನಿಮಗೆ ಕಾಯಂ ಕೆಲಸ ಕೊಡಿಸುವುದಾಗಿ ವಂಚಕರು ಪೀಡಿಸಿದರೆ ನೇರವಾಗಿ ನಮಗೆ ದೂರು ನೀಡಿ, ಹಣ ಕೊಟ್ಟು ಮೋಸಹೋಗಬಾರದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜನಾರ್ದನ್, ತಾಪಂ ಯೋಜನಾಧಿಕಾರಿ ಸುರೇಶ್, ಪಿಡಿಒಗಳು, ಪೌರಕಾರ್ಮಿಕರು ಇದ್ದರು.