ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಮಾಹಿತಿ ಪಡೆದರು. ಡಾ.ಶ್ರೀನಿವಾಸ್, ಡಾ.ಶಶಿಧರ್, ಡಾ.ಶೋಭಾ ಇತರರು ಇದ್ದರು. 
ಮೈಸೂರು

ಸಾರ್ವಜನಿಕರಿಗೆ ಮನೋಭಾವದಿಂದ ಚಿಕಿತ್ಸೆ ನೀಡಿ

ಲೋಕೇಶ್ ಮನು. ಡಿ
ಪಿರಿಯಾಪಟ್ಟಣ: ಸಾರ್ವಜನಿಕ ಆಸ್ಪತ್ರೆಗೆ ಬರುವ ಗರ್ಭಿಣಿಯರು ಮತ್ತು ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸೇವಾಪರತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಯೋಗ ಕ್ಷೇಮ ಆಲಿಸಿ ಮಾತನಾಡಿದರು.
ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯ ಜತೆಗೆ ಔಷಧ ಕೊರತೆಯೂ ಕಂಡುಬಂದಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಆರೋಗ್ಯ ಇಲಾಖೆ ಆಯುಕ್ತರಿಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಪತ್ರ ವ್ಯವಹಾರ ನಡೆಸುವುದಾಗಿ ತಿಳಿಸಿದರು. ಗುತ್ತಿಗೆ ನೌಕರರಿಗೆ ಕಳೆದ ಎರಡು ತಿಂಗಳಿಂದ ಸಂಬಳವಾಗಿಲ್ಲ ಎಂದು ಕೆಲವು ನರ್ಸ್‌ಗಳು ಮನವಿ ಮಾಡಿದರು.
ಆಸ್ಪತ್ರೆಯಲ್ಲಿ ಮಾಸಿಕ 60ಕ್ಕೂ ಹೆಚ್ಚು ಹೆರಿಗೆ ಮಾಡಿಸಲಾಗುತ್ತಿದ್ದು, ತಾಲೂಕಿನಲ್ಲಿ ಪ್ರತ್ಯೇಕ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಅಗತ್ಯವಿದ್ದು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಶಿಧರ್ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಶೋಭಾ ಸೇರಿದಂತೆ ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.