ಮೈಸೂರು: ಮೈಸೂರಿನ ಅಭಿವೃದ್ಧಿಗೆ ಪೂರಕವಾಗಿರುವ ಪೆರಿಫೆರಲ್ ರಿಂಗ್ ರೋಡ್(ಬಾಹ್ಯ ವರ್ತುಲ ರಸ್ತೆ) ನಿರ್ಮಾಣ ಯೋಜನೆಯನ್ನು ಯಾವ ಮಾದರಿಯಲ್ಲಿ ನಿರ್ಮಿಸಬೇಕು ಎಂಬುದೇ ಇನ್ನೂ ನಿರ್ಧಾರವಾಗದೆ ಯೋಜನೆ ತಡವಾಗುತ್ತಿದೆ.
ಆದರೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪಿಪಿಪಿ ಮಾದರಿಯಲ್ಲಿ ರಸ್ತೆ ನಿರ್ಮಾಣ ಮಾಡುವುದಕ್ಕಿಂತ ಪ್ರಾಧಿಕಾರದ ಅನುದಾನದಲ್ಲಿಯೇ ರಸ್ತೆ ನಿರ್ಮಾಣ ಮಾಡಿದರೆ ಅನುಕೂಲವಾಗಲಿದೆ ಎಂಬುದನ್ನು ಮನಗಂಡು ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿದ್ದಾರೆ. ಆದರೆ, ಸರ್ಕಾರದ ಎಂಡಿಎ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ಯಾವ ಮಾದರಿಯಲ್ಲಿ ನಿರ್ಮಾಣವಾಗಬೇಕು ಎಂಬ ಗೊಂದಲ ಸೃಷ್ಟಿಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಮೈಸೂರಿನ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಮೈಸೂರು ನಗರದ ಹೊರವಲಯದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣದ ಘೋಷಣೆ ಮಾಡಿದ್ದರು.
ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಯೋಜನಾ ವರದಿ ಸಿದ್ಧಪಡಿಸಿ ಕಳುಹಿಸುವಂತೆ ಸೂಚನೆ ನೀಡಿತ್ತು. ನಗರ ದಿನೇ ದಿನೆ ಬೆಳವಣಿಗೆ ಹೊಂದುತ್ತಿದೆ. ಇದರಿಂದ ರಿಂಗ್ ರಸ್ತೆಯ ಮೇಲಿನ ಒತ್ತಡವೂ ಹೆಚ್ಚಾಗುತ್ತಿದೆ. ಹೀಗಾಗಿ ನಗರದ ಸಂಚಾರ ದಟ್ಟಣೆ ನಿರ್ವಹಣೆಯ ದೃಷ್ಟಿಯಿಂದ ಪೂರ್ವಭಾವಿಯಾಗಿ ನಗರದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಮೈಸೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು 73 ಕಿ.ಮೀ ಉದ್ದದ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣವಾಗಬೇಕಿದೆ.
ರಿಂಗ್ ರಸ್ತೆಯಿಂದ 5 ಕಿ.ಮೀ. ಪರಿಧಿಯಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ವಿವರವಾದ ಮಾಹಿತಿ ಒಳಗೊಂಡಂತೆ ವರದಿ ಸಿದ್ಧ್ದಪಡಿಸಲು ಹಲವು ಸಂಸ್ಥೆಗಳು ಮುಂದೆ ಬಂದಿದ್ದವು. ಅದರಲ್ಲಿ ಸರ್ಕಾರದ ನಿಯಮಾವಳಿಯಂತೆ ಆರ್ಹತೆ ಇರುವ ಮೂರು ಸಂಸ್ಥೆಗಳ ಹೆಸರನ್ನು ಅಂತಿಮಗೊಳಿಸಿ, ಈ ಪೈಕಿ ಒಂದು ಸಂಸ್ಥೆಯನ್ನು ಆಯ್ಕೆ ಮಾಡಿ ಅವರಿಂದ ಡಿಪಿಆರ್ ಸಿದ್ದಪಡಿಸುವ ಕಾರ್ಯಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸರ್ಕಾರಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ‘ವಿಜಯವಾಣಿ’ ಲೌಡ್ ಸ್ಪೀಕರ್‌ನಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗಿದೆ.