ಬೆಟ್ಟದಪುರದಲ್ಲಿ ಸೋಮವಾರ ಸಂಭವಿಸಿದ ಅಪಘಾತ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರ್ ನಡೆಸಿದರು. 
ಮೈಸೂರು

ಬೈಕ್‌ಗೆ ಜೆಸಿಬಿ ಡಿಕ್ಕಿಯಾಗಿ ಮಹಿಳೆ ಸಾವು

ಪ್ರಮುಖ ಮುಖ್ಯಾಂಶಗಳು

  • ಪತಿಗೆ ಗಂಭೀರ ಗಾಯ, ಮಗು ಅಪಾಯದಿಂದ ಪಾರು
  • ಬೆಟ್ಟದಪುರ ಮುಖ್ಯರಸ್ತೆಯಲ್ಲಿ ಅಪಘಾತ
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಮುಖ್ಯರಸ್ತೆಯಲ್ಲಿ ಸೋಮವಾರ ಬೈಕ್‌ಗೆ ಜೆಸಿಬಿ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಟ್ಟದಪುರ ನಿವಾಸಿ ಅಂಜಲಿ(28) ಮೃತಪಟ್ಟವರು. ಅವರ ಪತಿ ಸಾಗರ್(35) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಯಲ್ಲಿದ್ದ ಮಗುವಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಮಗುವಿನೊಂದಿಗೆ ಬೈಕ್‌ನಲ್ಲಿ ಪಿರಿಯಾಪಟ್ಟಣಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಜೆ.ಸಿ.ಬಿ.ವಾಹನದ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ನಡೆದಿದೆ. ಸ್ಥಳೀಯರ ಸಹಾಯದಿಂದ ಅಂಜಲಿ ಅವರನ್ನು ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಗರ್ ಅವರಿಗೂ ತಲೆಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ಬಳಿಕ ಜೆಸಿಬಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಅವನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮೃತರ ಸಂಬಂಧಿ ಬಿ.ಎಸ್ ಸುರೇಶ್ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.