ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯ ಅನುಸೂಚಿತ ಕಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಗಜೇಂದ್ರ ಚಿನ್ನಸ್ವಾಮಿ, ಚೋರನಹಳ್ಳಿ ಶಿವಣ್ಣ ಇನ್ನಿತರರಿದ್ದರು.  Resolve the problems faced by SC/ST students.
ಮೈಸೂರು

ಎಸ್/ಎಸ್‌ಟಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ

ದಲಿತ ಒಕ್ಕೂಟದಿಂದ ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರಿಗೆ ಮನವಿ

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿನಿಲಯಗಳಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸಮರ್ಪಕ ಪ್ರವೇಶಾವಕಾಶ ಕಲ್ಪಿಸುವುದು, ಗುಣಮಟ್ಟದ ಆಹಾರ, ಕುಡಿಯುವ ನೀರು, ಶೌಚಗೃಹ, ವಿದ್ಯುತ್, ಸ್ವಚ್ಛತೆ, ಭದ್ರತೆ ಸೇರಿದಂತೆ ವಿದ್ಯಾರ್ಥಿಗಳು ಎದುರಿಸುತ್ತಿರುವ ಮೂಲ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಲಾಯಿತು.

ವಿದ್ಯಾರ್ಥಿವೇತನ ವಿಳಂಬ, ಬಾಕಿ ಇರುವ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮೂಲ ಅಂಕಪಟ್ಟಿ, ಶೈಕ್ಷಣಿಕ ದಾಖಲೆ ಪಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆ, ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ಸಮಸ್ಯೆ ಬಗೆಹರಿಸಬೇಕೆಂದೂ ಆಗ್ರಹಿಸಲಾಯಿತು.

ವಿವಿ ಆವರಣದಲ್ಲಿ ಜಾತಿ ಆಧಾರಿತ ತಾರತಮ್ಯ, ಕಿರುಕುಳಕ್ಕೆ ಅವಕಾಶ ನೀಡಬಾರದು. ಎಸ್‌ಸಿ, ಎಸ್‌ಟಿ ವಿಭಾಗ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಬೋಧಕ, ಬೋಧಕೇತರ ಹುದ್ದೆಗಳ ಮೀಸಲಾತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ರೋಸ್ಟರ್ ಪದ್ಧತಿ ಅನುಷ್ಠಾನವನ್ನು ಪರಿಶೀಲಿಸಬೇಕು ಆಗ್ರಹಿಸಲಾಯಿತು.

ಭೋಜನದ ಅನುದಾನ ಸ್ಥಗಿತಗೊಂಡಿರುವುದರಿಂದ ಪರಿಶಿಷ್ಟ ವಿದ್ಯಾರ್ಥಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. 2023ರಿಂದ 2026ರವರೆಗಿನ ಬಾಕಿರುವ ಭೋಜನ ವೆಚ್ಚದ ಅನುದಾನವನ್ನು ಬಿಡುಗಡೆ ಮಾಡಬೇಕು. 2026-27ನೇ ಸಾಲಿಗೆ ಅಗತ್ಯವಿರುವ ಸುಮಾರು 2.30 ಕೋಟಿ ರೂ.ಅನುದಾನ ಒದಗಿಸಬೇಕೆಂದು ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ವಿವಿ ಹಾಸ್ಟೆಲ್‌ಗಳಿಗೆ ಆಯೋಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಕುಲಪತಿ ಮತ್ತು ಕುಲಸಚಿವರಿಂದ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ವರದಿ ಪಡೆಯಬೇಕು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪರಿಣಾಮಕಾರಿ ದೂರು ಪರಿಹಾರ ವ್ಯವಸ್ಥೆ ರೂಪಿಸಬೇಕು ಎಂದೂ ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ ಮಾತನಾಡಿ, ವಿವಿಯಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಮೂಲ ಸೌಲಭ್ಯಗಳಿಗಾಗಿ ಹಾಗೂ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದಕರ. ವಿದ್ಯಾರ್ಥಿಗಳ ಶಿಕ್ಷಣ, ವಸತಿ, ಆಹಾರದ ಹಕ್ಕುಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆಯೋಗವು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಿ ಮುಂದಿನ ಹಂತದ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು.