ಶನಿವಾರ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಸಮಸ್ಯೆಗಳನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಆಲಿಸುತ್ತಿರುವುದು. 
ಮೈಸೂರು

ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ

ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಮತ್ತು ಹೆಡಿಯಾಲ ಭಾಗದಲ್ಲಿ ಹೆಚ್ಚಾಗಿರುವ ಕಾಡು ಪ್ರಾಣಿಗಳ ಹಾವಳಿ ಕಡಿವಾಣ ಹಾಕಬೇಕಿದೆ. ಈ ಭಾಗದಲ್ಲಿ ರಾತ್ರಿ ವೇಳೆ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿದರು.

ಕೆಲ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿದೆ. ಶೀಘ್ರದಲ್ಲಿ ಅವುಗಳನ್ನು ಸರಿಪಡಿಸಿ ಶುದ್ಧ ನೀರು ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಚಿಲಕಹಳ್ಳಿ, ಕೊತ್ತನಹಳ್ಳಿ ಕಾಲನಿಗಳಲ್ಲಿ ಕೆಲ ಮಧ್ಯವರ್ತಿಗಳು ಕಳಪೆ ಕಾಮಗಾರಿ ನಡೆಸಿ ಮನೆ ನಿರ್ಮಿಸಿ ಆದಿವಾಸಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ಇಒಗೆ ತಿಳಿಸಿದರು.

ಬಹುತೇಕ ಕಡೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯ ಸೇರಿದಂತೆ ಬೀದಿ ದೀಪ, ಒಳಚರಂಡಿ ಸೇರಿದಂತೆ ಮೂಲ ಸೌಕರ್ಯ ಕೊರತೆ ಕಾಡುತ್ತಿದೆ. ತಾಲೂಕು ಮಟ್ಟದ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದರು.