ಮೈಸೂರು

ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ

* ಎರಡು ಮಹತ್ವದ ಯೋಜನೆಗಳಿಗೆ ಚಾಲನೆ * ನಗರದಾದ್ಯಂತ ಭಾರಿ ಬಿಗಿ ಭದ್ರತೆ

ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಪರಿಸರ ಸಂರಕ್ಷಣೆ ಹಾಗೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿರುವ ಎರಡು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಶುಕ್ರವಾರ ನಗರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಗರದಾದ್ಯಂತ ಭದ್ರತೆ ಬಿಗಿಗೊಳಿಸಲಾಗಿದೆ.

ಕೆ.ಸಿ.ನಗರದ ಭಾರತ್ ವನ್ ನಗರ ಅರಣ್ಯ ಯೋಜನೆಯಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ದೇಶದ ಮೊದಲ ಎಲ್‌ಇಡಿ ಡೋಮ್ ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಎರಡೂ ಯೋಜನೆಗಳು ಪರಿಸರ ಸಂರಕ್ಷಣೆ ಹಾಗೂ ವೈಜ್ಞಾನಿಕ ಶಿಕ್ಷಣಕ್ಕೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 3.20ಕ್ಕೆ ಮೈಸೂರು ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಕೆ.ಸಿ.ಲೇಔಟ್‌ನ ‘ಭಾರತ್ ಒನ್’ಗೆ ತೆರಳಿ ಸಂಜೆ 3.30ರಿಂದ 3.45ರವರೆಗೆ ನಡೆಯುವ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ರಿಂದ 5.45ರವರೆಗೆ ಚಾಮುಂಡಿಬೆಟ್ಟದ ತಪ್ಪಲಿನತಾರಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 6 ಗಂಟೆಗೆ ಮೈಸೂರು ವಿಮಾನ ನಿಲ್ದಾಣ ತಲುಪಿ, 6.05ಕ್ಕೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ವಿಶೇಷ ರಕ್ಷಣಾ ಪಡೆ ಮೈಸೂರಿನಲ್ಲಿ ಭದ್ರತಾ ವ್ಯವಸ್ಥೆಯ ಉಸ್ತುವಾರಿ ವಹಿಸಿಕೊಂಡಿದೆ. ತಾರಾಲಯದ ಆವರಣವನ್ನು ತನ್ನ ನಿಯಂತ್ರಣಕ್ಕೆ ಪಡೆದಿದ್ದು, ಪ್ರವೇಶಿಸುವವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಭಾರತ್ ಒನ್ ಮತ್ತು ತಾರಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪ್ರಧಾನಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ವಿದ್ಯಾರ್ಥಿಗಳ ಹಿನ್ನೆಲೆ ಪರಿಶೀಲನೆ ನಡೆಸಲಾಗಿದ್ದು, ಭದ್ರತಾ ನಿಯಮಗಳ ಕುರಿತು ಸೂಚನೆ ನೀಡಲಾಗಿದೆ.

ಅಣಕು ಬೆಂಗಾವಲು

ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಸುಮಾರು 50 ವಾಹನಗಳನ್ನು ಒಳಗೊಂಡ ಅಣಕು ಬೆಂಗಾವಲು ವಾಹನ ಸಂಚಾರ ನಡೆಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮೂರು ತಿಂಗಳ ಅಂತರದಲ್ಲಿ 2ನೇ ಭೇಟಿ

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಿ ರಾಮಕೃಷ್ಣ ಆಶ್ರಮದ ವಿವೇಕ ಸ್ಮಾರಕವನ್ನು ಉದ್ಘಾಟಿಸಿದ್ದರು. ಈಗ ಮೂರು ತಿಂಗಳ ಅಂತರದಲ್ಲಿ ಮತ್ತೊಮ್ಮೆ ನಗರಕ್ಕೆ ಆಗಮಿಸುತ್ತಿದ್ದಾರೆ. ಅಕ್ಟೋಬರ್ 24ರಂದು ನಿಗದಿಯಾಗಿದ್ದ ಭೇಟಿ ಮುಂದೂಡಿಕೆಯಾಗಿತ್ತು. ಈಗ ನ.13ರಂದು ಭೇಟಿ ನಿಗದಿಯಾಗಿದ್ದು, ನಗರದಲ್ಲಿ ಮತ್ತೊಮ್ಮೆ ಪ್ರಧಾನಿ ಕಾರ್ಯಕ್ರಮದ ಸಂಭ್ರಮ ಮನೆಮಾಡಿದೆ. ಪರಿಸರ ಸಂರಕ್ಷಣೆಗೆ ಮಾದರಿಯಾಗಲಿರುವ ಭಾರತ್ ಒನ್ ಮತ್ತು ಖಗೋಳ ವಿಜ್ಞಾನ ಶಿಕ್ಷಣಕ್ಕೆ ಹೊಸ ದಿಕ್ಕು ನೀಡಲಿರುವ ತಾರಾಲಯದ ಉದ್ಘಾಟನೆಯೊಂದಿಗೆ ಮೈಸೂರು ಅಭಿವೃದ್ಧಿಯ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ.