ಸರಗೂರು: ಪಟ್ಟಣದ ರಸ್ತೆ ಬದಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸದಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಟೌನ್ ಅಧ್ಯಕ್ಷ ಹಲಸೂರು ಗೋವಿಂದರಾಜು ದೂರಿದರು.
ರಸ್ತೆಯ ಪಕ್ಕದಲ್ಲಿರುವ ಸಾರ್ವಜನಿಕ ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ಹಾಗೂ ಅಂಗಡಿಗಳನ್ನು ನಿರ್ಮಿಸಿರುವುದರಿಂದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಮತ್ತು ತಿರುವುಗಳಲ್ಲಿ ವಾಹನಗಳನ್ನು ತಿರುಗಿಸಲು ಸಮಸ್ಯೆ ಉಂಟಾಗುತ್ತಿದೆ. ಇದರಿಂದ ಪ್ರತಿನಿತ್ಯ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಪಾದಚಾರಿಗಳು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರಗೂರು ಪಟ್ಟಣ ಪಂಚಾಯಿತಿ ಆಡಳಿತದ ವಿರುದ್ಧ ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಸಾರ್ವಜನಿಕ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕೆಂಬ ನಿಯಮಗಳಿದ್ದರೂ, ಪಟ್ಟಣದಲ್ಲಿ ಕೆಲವು ಕಟ್ಟಡಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಅಲ್ಲದೆ ಸಂಬಂಧಪಟ್ಟ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡುವ ಪ್ರಕ್ರಿಯೆಯನ್ನೂ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಇನ್ನೊಂದೆಡೆ, ರಸ್ತೆ ಬದಿಯಲ್ಲಿ ಜೀವನೋಪಾಯಕ್ಕಾಗಿ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಹಾಗೂ ಫುಟ್ಪಾತ್ ಮೇಲಿನ ವ್ಯಾಪಾರ ಮಳಿಗೆಗಳನ್ನು ತೆರವುಗೊಳಿಸಲಾಗಿದೆ. ಆದರೆ ರಸ್ತೆ ಬದಿಯಲ್ಲಿ ದೊಡ್ಡ ಕಟ್ಟಡ ಹಾಗೂ ಅಂಗಡಿಗಳನ್ನು ನಿರ್ಮಿಸಿಕೊಂಡಿರುವ ಪ್ರಭಾವಿ ವ್ಯಕ್ತಿಗಳ ಕಟ್ಟಡಗಳ ವಿರುದ್ಧ ಮಾತ್ರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.