ಎಚ್.ಡಿ. ಕೋಟೆ: ಕಾಡಿನಿಂದ ನಾಡಿಗೆ ಆದಿವಾಸಿಗಳನ್ನು ಕರೆತಂದಿದ್ದರೂ ಬಡತನ ರೇಖೆಗಿಂತ ಕೆಳಮಟ್ಟದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಇನ್ನಾದರೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ತಾಲೂಕಿನ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ -್ಝಠಿ;6 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ಆಶ್ರಮ ಶಾಲೆಯ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಆದಿವಾಸಿ ಸಮುದಾಯದ ಜನರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಶಿಕ್ಷಣವು ಪ್ರತಿಯೊಬ್ಬ ಮನುಷ್ಯನನ್ನು ಪ್ರಜ್ಞಾವಂತನನ್ನಾಗಿ ಮಾಡುವ ಜತೆಗೆ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಆತ್ಮವಿಶ್ವಾಸ ನೀಡುತ್ತದೆ. ಅದರಲ್ಲಿಯೂ ಕಾಡಿನಿಂದ ನಾಡಿಗೆ ಬಂದಿರುವ ಆದಿವಾಸಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಅತ್ಯಂತ ಅಗತ್ಯವಾಗಿದೆ. ಶಿಕ್ಷಣದ ಮೂಲಕವೇ ಅವರು ಬದುಕನ್ನು ಬದಲಾಯಿಸಿಕೊಳ್ಳಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಈ ಉದ್ದೇಶದಿಂದ ಮೂಲಸೌಕರ್ಯಗಳೊಂದಿಗೆ ಹೈಟೆಕ್ ವಸತಿ ಶಾಲೆ ನಿರ್ಮಿಸಲಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಶಾಲೆಯ ಸೌಲಭ್ಯಗಳನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉನ್ನತ ಸ್ಥಾನ ಅಲಂಕರಿಸಬೇಕು ಎಂದು ಹೇಳಿದರು.
ಆದಿವಾಸಿ ಸಮುದಾಯದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಒಟ್ಟಿಗೆ ಕುಳಿತು ಚರ್ಚೆ ನಡೆಸಿ, ಆದಿವಾಸಿಗಳ ಭೂಮಿ, ವಸತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಮುಂದಾದರೆ ಅವರ ಬದುಕಿನಲ್ಲಿ ಮಹತ್ತರ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಆದಿವಾಸಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ತಿಳಿಸಿದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, 2019ರಲ್ಲಿ ಭೀಮನಹಳ್ಳಿ ಸಮೀಪದ ಮಾಸ್ತಿಗುಡಿ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ ಪುನರ್ವಸತಿ ಕಲ್ಪಿಸಲಾದ ಆದಿವಾಸಿ ಕುಟುಂಬಗಳಿಗೆ ತಲಾ ಮೂರು ಎಕರೆ ಜಮೀನು ಮಂಜೂರು ಮಾಡಲಾಗಿದೆ. ಆದರೆ ಫಲಾನುಭವಿಗಳಿಗೆ ಜಮೀನಿನ ದಾಖಲೆ ಒದಗಿಸುವುದು ಸೇರಿದಂತೆ ಕೆಲವು ಪ್ರಕ್ರಿಯೆಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳೊಳಗೆ ಫಲಾನುಭವಿಗಳಿಗೆ ಆರ್ಟಿಸಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವ ಯೋಜನೆ ರೂಪಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಉಪವಿಭಾಗಾಧಿಕಾರಿ ಶೇಖರ್, ಡಿಸಿಎಫ್ ಪರಮೇಶ್, ಪರಿಶಿಷ್ಟ ವರ್ಗಗಳ ಯೋಜನಾ ಸಮನ್ವಯಾಧಿಕಾರಿ ಭಾರತಿ, ತಹಸೀಲ್ದಾರ್ ರುಕೀಯಾ ಬೇಗಂ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹೇಶ್, ನಾಗರಾಜು, ಕಾರ್ಯನಿರ್ವಾಹಕ ಅಧಿಕಾರಿ ರವಿಚಂದ್ರ, ಪೊಲೀಸ್ ನಿರೀಕ್ಷಕ ಗಂಗಾಧರ್, ಚಂದ್ರೇಗೌಡ, ಪ್ರದೀಪ್, ರಾಜನಾಯಕ, ಬೈಪಾಸ್ ಮಂಜು, ಆರ್.ಎಂ. ಸುರೇಶ್, ಮಣಿಕಂಠ, ಕಾಳಕಲ್ಕರ್ ಇದ್ದರು.