ಮೈಸೂರು: ಸಾರ್ವಜನಿಕರಿಗೆ ತ್ವರಿತ ಹಾಗೂ ಸುಲಭವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಡಿ.12ರಂದು ಜಿಲ್ಲೆಯ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದನ್ನು ಏರ್ಪಡಿಸಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳು, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನದ ಪ್ರಕರಣಗಳನ್ನು ಪರಸ್ಪರ ಮಾತುಕತೆ, ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಯಂತ್ ಕುಮಾರ್ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಕಾರ್ಮಿಕರ ವಿವಾದ, ವಾಹನ ಅಪಘಾತ ಪರಿಹಾರ ಪ್ರಕರಣ, ವಿದ್ಯುತ್-ನೀರಿನ ಬಿಲ್ಗಳಿಗೆ ಸಂಬಂಧಿಸಿದ ವಿವಾದ, ವೈವಾಹಿಕ ಪ್ರಕರಣಗಳು ಸೇರಿದಂತೆ ರಾಜಿ ಮಾಡಿಕೊಳ್ಳಬಹುದಾದ ಸಿವಿಲ್ ಹಾಗೂ ಇತರ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಗ್ರಾಹಕರ ವಿವಾದಗಳು, ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಇತರ ಪೂರ್ವ ವ್ಯಾಜ್ಯ ಪ್ರಕರಣಗಳನ್ನೂ ಸಂಧಾನದ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಪೊಲೀಸ್ ಇಲಾಖೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನ.21ರಿಂದ ಡಿಸೆಂಬರ್ 11ರವರೆಗೆ ಇಂತಹ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
2026ರಲ್ಲಿ ಈಗಾಗಲೇ ಮೂರು ಲೋಕ ಅದಾಲತ್ ನಡೆಸಲಾಗಿದ್ದು, ಕಳೆದ ಸೆ.19ರಂದು ನಡೆದ ಅದಾಲತ್ನಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,34,313 ಪ್ರಕರಣಗಳು ಹಾಗೂ 6,733 ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ 81,797 ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ ಮಾತನಾಡಿ, ಲೋಕ ಅದಾಲತ್ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ನ್ಯಾಯಾಲಯದ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಈಗಾಗಲೇ ನ್ಯಾಯಾಲಯದ ಶುಲ್ಕ ಪಾವತಿಸಿದ್ದರೆ, ಪ್ರಕರಣ ಇತ್ಯರ್ಥವಾದ ನಂತರ ನಿಯಮಾನುಸಾರ ಮರುಪಾವತಿ ಪಡೆಯಲು ಅವಕಾಶವಿದೆ. ಉಭಯ ಪಕ್ಷಗಳ ಒಪ್ಪಿಗೆಯೊಂದಿಗೆ ಕೈಗೊಳ್ಳುವ ತೀರ್ಮಾನವು ಅಂತಿಮ. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇಲ್ಲ. ಇದರಿಂದ ಸಮಯ, ಹಣದ ಉಳಿತಾಯವಾಗುವುದರ ಜತೆಗೆ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಬಾಕಿ ಪ್ರಮಾಣವೂ ಕಡಿಮೆಯಾಗಲಿದೆ ಎಂದು ಹೇಳಿದರು.
ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ಉಭಯ ಪಕ್ಷಗಳ ನಡುವೆ ಸೌಹಾರ್ದಯುತ ಸಂಬಂಧ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಸಾರ್ವಜನಿಕರು ತಮ್ಮ ಪ್ರಕರಣವನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಇ-ಮೇಲ್: mysurudlsa@gmail.com, ದೂ. 0821-2330130, 9141193953, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ 15100 ಸಂಪರ್ಕಿಸಬಹುದು ಎಂದು ತಿಳಿಸಿದರು.
ನಗರ ಡಿಸಿಪಿ ಸುಂದರ್ರಾಜ್ ಮಾತನಾಡಿ, ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡುವ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪೊಲೀಸ್ ಇಲಾಖೆ ಸಂಚಾರ ವಿಭಾಗದಲ್ಲಿ ದಾಖಲಾದ ಟ್ರಾಫಿಕ್ ಚಲನ್ ಪ್ರಕರಣಗಳು, 1991ರಿಂದ 2025ರ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ನೀಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದರು
ಈ ಹಿಂದೆ 2026ರ ಜುಲೈ 11ರಂದು ನಡೆದ ಲೋಕ ಅದಾಲತ್ನಲ್ಲಿ 2,75,853 ಇಂತಹ ಪ್ರಕರಣ ಇತ್ಯರ್ಥಪಡಿಸಲಾಗಿದ್ದು, 6,89,97,350 ರೂ. ದಂಡದ ಮೊತ್ತ ವಸೂಲಿ ಮಾಡಲಾಗಿದೆ. ಅಲ್ಲದೆ, 18 ಸಾವಿರ ಇ-ಚಲನ್ ಪ್ರಕರಣವನ್ನೂ ಇತ್ಯರ್ಥಪಡಿಸಿ 94,350 ರೂ. ಮೊತ್ತ ಸಂಗ್ರಹಿಸಲಾಗಿದೆ ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್ ಇತರರಿದ್ದರು