ಬೆಟ್ಟದಪುರ ದೊಡ್ಡಕಮರವಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ವತಿಯಿಂದ ಆಯೋಜಿಸಿದ್ದ ಹಣಕಾಸು ಸಾಕ್ಷರತಾ ಅಭಿಯಾನದಲ್ಲಿ ಲೀಡ್ ಬ್ಯಾಂಕ್ ಪ್ರತಿನಿಧಿ ರೂಪಾ ಮಾತನಾಡಿದರು. ಕೀರ್ತಿಕುಮಾರ್, ಅಭಿಜಿತ್, ನವೀನ್ ಕುಮಾರ್ ಇದ್ದರು. 
ಮೈಸೂರು

ಹಣಕಾಸು ಯೋಜನೆಗಳ ಸದುಪಯೋಗವಾಗಲಿ

ಲೀಡ್ ಬ್ಯಾಂಕ್ ಪ್ರತಿನಿಧಿ ರೂಪಾ ಸಲಹೆ

ಬೆಟ್ಟದಪುರ: ಸಾರ್ವಜನಿಕರು ಬ್ಯಾಂಕ್‌ಗಳ ಮೂಲಕ ದೊರೆಯುವ ವಿವಿಧ ಹಣಕಾಸು ಯೋಜನೆಗಳ ಬಗ್ಗೆ ಅರಿವು ಹೊಂದಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೀಡ್ ಬ್ಯಾಂಕ್ ಪ್ರತಿನಿಧಿ ರೂಪಾ ಸಲಹೆ ನೀಡಿದರು.

ಪಿರಿಯಾಪಟ್ಟಣ ತಾಲೂಕಿನ ದೊಡ್ಡಕಮರವಳ್ಳಿ ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಹಣಕಾಸು ಸಾಕ್ಷರತಾ ಅಭಿಯಾನದಲ್ಲಿ ಮಾತನಾಡಿ, ರೀ-ಕೆವೈಸಿ, ಸಿಕೆವೈಸಿ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಉದ್ದೇಶ, ಅರ್ಹತೆ ಮತ್ತು ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಕರ್ನಾಟಕ ಗ್ರಾಮೀಣ ಬ್ಯಾಂಕಿನ ಶಾಖಾ ವ್ಯವಸ್ಥಾಪಕಿ ಎಚ್.ಜೆ. ಸುಮಾ ಮಾತನಾಡಿ, ಗ್ರಾಮೀಣ ಬ್ಯಾಂಕ್‌ನಿಂದ ಗ್ರಾಹಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ವಿವರಿಸಿದರು. ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಬ್ಯಾಂಕ್ ಒದಗಿಸುವ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೀರ್ತಿಕುಮಾರ್, ಬ್ಯಾಂಕ್ ಸಿಬ್ಬಂದಿ ಅಭಿಜಿತ್, ನವೀನ್ ಕುಮಾರ್ ಸೇರಿದಂತೆ ಗ್ರಾಹಕರು ಹಾಗೂ ಸಾರ್ವಜನಿಕರು ಇದ್ದರು.