ಜಿಲ್ಲೆ

ಹಿರಿಯರ ನಡವಳಿಕೆ ಮೈಗೂಡಿಸಿಕೊಳ್ಳೋಣ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ನಾಡಪ್ರಭು ಕೆಂಪೇಗೌಡ ಅವರು ಮಾಡಿರುವ ಸಾಧನೆಯನ್ನು ಇನ್ನೆಷ್ಟೇ ಸರ್ಕಾರಗಳು ಬಂದರೂ ಮಾಡಲು ಸಾಧ್ಯವಿಲ್ಲ. ಅಂತೆಯೇ ಸಮಾಜಕ್ಕೆ ಕೊಡುಗೆ ನೀಡಿದ ಹಿರಿಯರ ಸಾಧನೆ ಹಾಗೂ ಇತಿಹಾಸವನ್ನು ತಿಳಿದುಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಳೇ ಮೈಸೂರು ಭಾಗದ ಸಮಗ್ರ ಅಭಿವೃದ್ದಿಗೆ ತಮ್ಮ ಆಳ್ವಿಕೆಯಲ್ಲಿ ಅಂಕಿತ ಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವ ಮಾನ್ಯತೆ ಪಡೆದಿರುವ ಬೆಂಗಳೂರು ನಿರ್ಮಾಣಕ್ಕೆ ಶ್ರಮಿಸಿದ ನಾಡಪ್ರಭು ಕೆಂಪೇಗೌಡರ ಇತಿಹಾಸವನ್ನು ಅರಿಯದವರು ಈ ನೆಲದಲ್ಲಿ ವಾಸಿಸಲು ಅರ್ಹರಲ್ಲ. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಹಿರಿಯ ಜೀವಗಳ ಬಗ್ಗೆ ತಿಳಿದುಕೊಳ್ಳದಿದ್ದರೆ ವ್ಯರ್ಥ. ಮಾತ್ರವಲ್ಲದೆ ಅವರ ಸಮಾಜಮುಖಿ ನಡವಳಿಕೆಯನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ ಎಂದರು.

ದೆಹಲಿಗೆ ರಾಷ್ಟ್ರ ರಾಜಧಾನಿ ಎಂಬ ಹಿರಿಮೆ, ಮುಂಬೈಗೆ ವಾಣಿಜ್ಯನಗರಿ ಎಂಬ ಖ್ಯಾತಿ ದೊರಕಿದರೆ ಬೆಂಗಳೂರಿಗೆ ವಿಶ್ವಮಾನ್ಯತೆ ದೊರೆತಿದೆ. ಅದಕ್ಕೆ ಕಾರಣ ಕೆಂಪೇಗೌಡರ ದೂರದೃಷ್ಟಿ. ನಾಡಿನ ನೆಲ, ಜಲ, ಧರ್ಮ, ಜಾತ್ಯಾತೀತತೆ ಹಾಗೂ ಭಾಷೆಯ ಬೆಳವಣಿಗೆಗೆ ಬುನಾದಿ ಹಾಕಿದ ಕೆಂಪೇಗೌಡರು ಹಲವು ಸಮಾಜದ ವಾಣಿಜ್ಯ ಚಟುವಟಿಕೆಗಳಿಗೆ ಸೀಮಿತವಾಗುವ ರೀತಿಯಲ್ಲಿ ಬೆಂಗಳೂರು ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಶ್ರೇಷ್ಟ ಸಾಧಕ. ತಮ್ಮ ಆಳ್ವಿಕೆಯಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ದಿಗೆ ಮುನ್ನುಡಿ ಬರೆದ ಕೆಂಪೇಗೌಡರು ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ ಕೋಟೆ-ಕೊತ್ತಲಗಳನ್ನು ಕಟ್ಟಿ ಇಂದು ಬೆಂಗಳೂರು ವಿಶ್ವದ ಹಲವರಿಗೆ ಉದ್ಯೋಗ ನೀಡುವ ಕೇಂದ್ರವಾಗಿ ರೂಪುಗೊಂಡಿದೆ ಎಂದರು.

ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ರವಿಕುಮಾರ್ ಗಣಿಗ ವಹಿಸಿದ್ದರು. ಬೆಂಗಳೂರು ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಜಯರಾಮ್ ರಾಯಪುರ ಕೆಂಪೇಗೌಡರ ಬಗ್ಗೆ ಉಪನ್ಯಾಸ ನೀಡಿದರು. ಎಂಎಲ್‌ಸಿಗಳಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಮರಿತಿಬ್ಬೇಗೌಡ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಡಿಸಿ ಡಾ.ಕುಮಾರ್, ಜಿಲ್ಲಾ ಎಸ್ಪಿ ಎನ್.ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಡಿಸಿ ಡಾ.ಎಚ್.ಎಲ್.ನಾಗರಾಜು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಇತರರಿದ್ದರು.

ಇದೇ ವೇಳೆ ಬೆಂಗಳೂರು ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಜಯರಾಮ್ ರಾಯಪುರ, ಎಡಿಸಿ ಡಾ.ಎಚ್.ಎಲ್.ನಾಗರಾಜು ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.